ಉಡುಪಿ | ನಾಯಕತ್ವ ಗುಣಗಳನ್ನು ಬೆಳಸಲು ಸಹಕಾರಿ ಕ್ಷೇತ್ರದಲ್ಲಿ ಉತ್ತಮ ಅವಕಾಶ : ಬಿಷಪ್ ಜೆರಾಲ್ಡ್ ಲೋಬೊ

ಉಡುಪಿ : ಉತ್ತಮ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ನಾಯಕತ್ವವನ್ನು ಸಮಾಜಕ್ಕೆ ನೀಡಿದಾಗ ಜನರು ಕೂಡ ಅಂತಹ ನಾಯಕನ್ನು ಒಪ್ಪಿಕೊಳ್ಳುತ್ತಾರೆ. ಈ ನಿಟ್ಟಿನಲ್ಲಿ ಸರ್ವರೊಂದಿಗೆ ಬೆರೆತು ನಾಯಕತ್ವ ಗುಣಗಳನ್ನು ಬೆಳಸಲು ಸಹಕಾರಿ ಕ್ಷೇತ್ರದಲ್ಲಿ ಉತ್ತಮ ಅವಕಾಶವಿದೆ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ಹೇಳಿದ್ದಾರೆ.
ಕಥೊಲಿಕ್ ಸಭಾ ಉಡುಪಿ ಪ್ರದೇಶ ವತಿಯಿಂದ ಕಕ್ಕುಂಜೆ ಅನುಗ್ರಹ ಪಾಲನಾ ಕೆಂದ್ರದಲ್ಲಿ ರವಿವಾರ ಆಯೋಜಿಸಲಾದ ಸಹಕಾರಿ ಕ್ಷೇತ್ರದಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಕ್ರೈಸ್ತ ನಾಯಕರಿಗೆ ಸನ್ಮಾನಿಸಿ ಅವರು ಮಾತನಾಡಿದರು.
ಸಹಕಾರಿ ಕ್ಷೇತ್ರದಲ್ಲಿ ಕ್ರೈಸ್ತ ಸಮುದಾಯದ ಹಲವಾರು ನಾಯಕರು ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವುದು ಅಭಿನಂದನಾರ್ಹ ಸಂಗತಿಯಾಗಿದೆ. ಈ ಮೂಲಕ ಸಮಾಜದ ಜನರನ್ನು ನೇರವಾಗಿ ತಲುಪಿ ಅವರ ಅಗತ್ಯತೆಗಳಿಗೆ ಸ್ಪಂದಿಸುವ ಕೆಲಸ ಸಹಕಾರಿ ಕ್ಷೇತ್ರದ ನಿರ್ದೇಶಕರಿಂದ ನಡೆಯುತ್ತಿದೆ. ಎಲ್ಲಾ ಕ್ರೈಸ್ತ ಸಮುದಾಯದ ಸಹಕಾರಿಗಳು ಜೊತೆಯಾಗಿ ಒಂದೇ ಸೂರಿನಲ್ಲಿ ಒಗ್ಗಟ್ಟು ಪ್ರದರ್ಶಿಸಲು ಕ್ರೈಸ್ತ ಸಹಕಾರಿಗಳ ಒಕ್ಕೂಟದ ರಚನೆ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಚಿಂತನೆ ನಡೆಸುವುದು ಅಗತ್ಯವಾಗಿದೆ ಎಂದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಎಂಸಿಸಿ ಬ್ಯಾಂಕ್ ಮಂಗಳೂರು ಅಧ್ಯಕ್ಷ ಅನಿಲ್ ಲೋಬೊ ಮಾತನಾಡಿ, ರಾಷ್ಟ್ರೀಕೃತ ಬ್ಯಾಂಕುಗಳಿಗೆ ಸಿಗುವ ಸೌಲಭ್ಯಗಳು ಸಹಕಾರಿ ಸಂಸ್ಥೆಗಳಿಗೆ ಲಭಿಸುವುದಿಲ್ಲ. ಆದರೂ ಜನರ ಅಗತ್ಯತೆಗೆ ತಕ್ಕಂತೆ ಕರ್ತವ್ಯ ನಿರ್ವಹಿಸುವುದರೊಂದಿಗೆ ಇದೊಂದು ಸೇವೆ ಎಂಬ ನಿಟ್ಟಿನಲ್ಲಿ ಕೆಲಸ ಮಾಡಿದಾಗ ಆತ್ಮತೃಪ್ತಿ ಸಿಗುತ್ತದೆ ಎಂದು ತಿಳಿಸಿದರು.
ವಿಧಾನಪರಿಷತ್ ಸದಸ್ಯರಾದ ಐವನ್ ಡಿಸೋಜ ಸಹಕಾರಿ ಇಲಾಖೆಯಲ್ಲಿ ಕ್ರೈಸ್ತ ಸಮುದಾಯದ ಬಲವರ್ಧನೆ ಮಾಡುವ ಕುರಿತು ಸಲಹೆಗಳನ್ನು ನೀಡಿದರು. ಉಡುಪಿ ಧರ್ಮಪ್ರಾಂತ್ಯ ವ್ಯಾಪ್ತಿಯ ವಿವಿಧ ಸಹಕಾರಿ ಸಂಸ್ಥೆಗಳಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕರಾಗಿ ಹೊಸದಾಗಿ ಆಯ್ಕೆಯಾದವರಿಗೆ ಸನ್ಮಾನಿಸಲಾಯಿತು.
ಅಧ್ಯಕ್ಷತೆಯನ್ನು ಕಥೊಲಿಕ್ ಸಭಾ ಉಡುಪಿ ಪ್ರದೇಶ ಅಧ್ಯಕ್ಷ ಸಂತೋಷ್ ಕರ್ನೆಲಿಯೋ ವಹಿಸಿದ್ದರು. ಉಡುಪಿ ಧರ್ಮಪ್ರಾಂತ್ಯದ ಶ್ರೇಷ್ಠ ಗುರು ಹಾಗೂ ಕಥೊಲಿಕ್ ಸಭಾ ಉಡುಪಿ ಪ್ರದೇಶ ಆಧ್ಯಾತ್ಮಿಕ ನಿರ್ದೇಶಕ ಮೊನ್ಷಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್, 2025-26ನೇ ಸಾಲಿನ ಚುನಾಯಿತ ಕೇಂದ್ರಿಯ ಸಮಿತಿ ಅಧ್ಯಕ್ಷ ರೊನಾಲ್ಡ್ ಡಿಆಲ್ಮೇಡಾ, ನಿಕಟಪೂರ್ವ ಅಧ್ಯಕ್ಷ ಮೇರಿ ಡಿಸೋಜ ಉಪಸ್ಥಿತರಿದ್ದರು.
ಕಾರ್ಯಕ್ರಮದ ಸಂಚಾಲಕರಾದ ಎಲ್‌ರೋಯ್ ಕಿರಣ್ ಕ್ರಾಸ್ತಾ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು, ಪ್ರಧಾನ ಕಾರ್ಯದರ್ಶಿ ಒಲಿವಿಯಾ ಜೆ ಡಿಮೆಲ್ಲೊ ವಂದಿಸಿದರು. ಡಾ.ಜೆರಾಲ್ಡ್ ಪಿಂಟೊ ಕಾರ್ಯಕ್ರಮ ನಿರೂಪಿಸಿದರು.