ಉಡುಪಿ: ದಲಿತ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ; ಆರೋಪಿಗೆ ಮೂರು ವರ್ಷ ಜೈಲು ಶಿಕ್ಷೆ, ದಂಡ

Update: 2023-10-12 12:09 GMT

ಉಡುಪಿ: ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ವರ್ಷಗಳ ಹಿಂದೆ ನಡೆದ ಅಪ್ರಾಪ್ತ ದಲಿತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ ಮೂರು ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯ ಬುಧವಾರ ಆದೇಶಿಸಿದೆ

ಕುಂದಾಪುರದ ಅನುಪ್ (20) ಶಿಕ್ಷೆಗೆ ಗುರಿಯಾದ ಆರೋಪಿ.

ಈತ 2019ರ ಮೇ ತಿಂಗಳಲ್ಲಿ 16 ವರ್ಷದ ಅಪ್ರಾಪ್ತೆಯನ್ನು ಸಾಮಾಜಿಕ ಜಾಲತಾಣದ ಮೂಲಕ ಪರಿಚಯಮಾಡಿ ಕೊಂಡಿದ್ದನು. ಬಳಿಕ ಆಕೆಯ ಅಶ್ಲೀಲ ಚಿತ್ರಗಳನ್ನು ತನ್ನ ಮೊಬೈಲ್‌ಗೆ ತರಿಸಿಕೊಂಡು ಆಕೆಯನ್ನು ಹೆದರಿಸಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದನು ಎಂದು ದೂರಲಾಗಿತ್ತು. ಈ ಬಗ್ಗೆ ಆಗಿನ ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಕೆ. ಆರೋಪಿಯ ವಿರುದ್ಧ ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶ ಶ್ರೀನಿವಾಸ ಸುವರ್ಣ, ಸಾಕ್ಷಾಧಾರಗಳಿಂದ ಆರೋಪಿ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ 5,000 ರೂ. ದಂಡ ವಿಧಿಸಿ ಆದೇಶಿಸಿದರು. ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಹಕಾರ ನೀಡಿದ ಎನ್ನಲಾದ ಲಾಡ್ಜ್ ಒಂದರ ರಿಸೆಪ್ಶನನ್ನು ಸಾಕ್ಷಾಧಾರಗಳ ಕೊರತೆಯಿಂದ ಖುಲಾಸೆಗೊಳಿಸಿ ನ್ಯಾಯಾಧೀಶರು ಆದೇಶ ನೀಡಿದರು.

ನೊಂದ ಬಾಲಕಿಗೆ 25,000ರೂ. ಪರಿಹಾರವಾಗಿ ನೀಡುವಂತೆ ಸರಕಾರಕ್ಕೆ ನಿರ್ದೇಶನ ನೀಡಿ ನ್ಯಾಯಾಲಯ ಆದೇಶಿ ಸಿತು. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ವೈ.ರಾಘವೇಂದ್ರ ವಿಚಾರಣೆ ನಡೆಸಿದ್ದು ಕುಂದಾಪುರ ನ್ಯಾಯಾಲಯದ ಸರಕಾರಿ ಅಭಿಯೋಜಕ ಹರೀಶ್ಚಂದ್ರ ಉದ್ಯಾವರ ವಾದ ಮಂಡಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News