ಗಣೇಶ ವಿಗ್ರಹ ತಯಾರಕರಿಗೆ ಉಡುಪಿ ಡಿಸಿ ಡಾ. ವಿದ್ಯಾಕುಮಾರಿ ಸೂಚನೆ

Update: 2023-09-12 16:20 GMT

 ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ, ಸೆ.12: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಜಿಲ್ಲೆಯ ಕೆಲವು ಪ್ರದೇಶಗಳಲ್ಲಿರುವ ಗಣಪತಿ ವಿಗ್ರಹಗಳ ತಯಾರಿಕಾ ಘಟಕ ಹಾಗೂ ಮಾರಾಟ ಮಾಡುವ ಮಳಿಗೆಗಳನ್ನು ಪರೀಕ್ಷಿಸಿದಾಗ ನಿಷೇಧಿತ ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ವಿಗ್ರಹಗಳನ್ನು ತಯಾರಿಸುತ್ತಿರುವುದು ಹಾಗೂ ಅವುಗಳನ್ನು ಹಾಗೂ ಬಣ್ಣ ಲೇಪಿತವಾದ ವಿಗ್ರಹಗಳನ್ನು ಮಾರಾಟಕ್ಕಿಟ್ಟಿರುವುದು ಗಮನಕ್ಕೆ ಬಂದಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಉಪಯೋಗಿಸಿ ತಯಾರಿಸುತ್ತಿರುವ ವಿಗ್ರಹಗಳು, ಬಣ್ಣ ಲೇಪಿತವಾದ ಹಾಗೂ ಈಗಾಗಲೇ ತಯಾರಿಸಿ ಅಥವಾ ಇತರೆ ರಾಜ್ಯಗಳಿಂದ ಅಮದು ಮಾಡಿಕೊಂಡು ಮಾರಾಟಕ್ಕೆ ಇಟ್ಟಿರುವ ನಿಷೇಧಿತ ವಸ್ತುಗಳಿಂದ ತಯಾರಿಸಿದ ವಿಗ್ರಹಗಳನ್ನು ವಶಕ್ಕೆ ತೆಗೆದುಕೊಂಡು ಅವುಗಳನ್ನು ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಾಗಿಸಿ, ಶೆಡ್ಡರ್‌ಗಳನ್ನು ಉಪಯೋಗಿಸಿ ಲ್ಯಾಂಡ್ ಫಿಲ್‌ಸೈಟ್‌ನಲ್ಲಿ ವಿಲೇವಾರಿ ಮಾಡಬೇಕೆಂದು ಪೌರಾಯುಕ್ತರು/ ಮುಖ್ಯಾಧಿಕಾರಿಗಳು, ನಗರಸಭೆ/ ಪುರಸಭೆ/ ಪಟ್ಟಣ ಪಂಚಾಯತ್ ಇವರಿಗೆ ಪತ್ರದ ಮೂಲಕ ತಿಳಿಸಲಾಗಿದೆ ಎಂದು ಪ್ರಕಟಣೆ ಹೇಳಿದೆ.

ಜಿಲ್ಲೆಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತ ವಿಗ್ರಹಗಳನ್ನು ತಯಾರಿಸುವ ಹಾಗೂ ಮಾರಾಟ ಮಾಡುವುದನ್ನು ತಡೆಯಲು ಹಾಗೂ ನಿಯಮ ಉಲ್ಲಂಘಿಸಿ ಅನಧಿಕೃತವಾಗಿ ತಯಾರಿ/ ಮಾರಾಟ ವ್ಯಕ್ತಿ/ ಸಂಸ್ಥೆಗಳ ಮೇಲೆ ಕಾನೂನು ಕ್ರಮ ಜರುಗಿಸಲು ಕ್ರಮ ಕೈಗೊಳ್ಳಲು ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಿಗೆ ಆದೇಶಿಸಲಾಗಿದೆ.

ಈ ಅಧಿಸೂಚನೆಯಂತೆ ನಗರ ಸ್ಥಳೀಯ ಸಂಸ್ಥೆಗಳ ಮೂಲಕ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲು ಯೋಜನಾ ನಿರ್ದೆಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ ಇವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News