ದಲಿತ ವಿರೋಧಿ ನೀತಿ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ಪ್ರತಿಭಟನೆ
ಉಡುಪಿ, ಆ.10: ರಾಜ್ಯ ಸರಕಾರದ ದಲಿತ ವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿ ಜಿಲ್ಲಾ ಎಸ್ಸಿ ಮತ್ತು ಎಸ್ಟಿ ಮೋರ್ಚಾ ವತಿಯಿಂದ ಪ್ರತಿಭಟನೆಯನ್ನು ನಗರದ ಅಜ್ಜರಕಾಡಿನ ಸೈನಿಕರ ಹುತಾತ್ಮ ಭವನದ ಬಳಿ ಗುರುವಾರ ಹಮ್ಮಿಕೊಳ್ಳಲಾಗಿತ್ತು.
ದಲಿತ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ 11 ಸಾವಿರ ಕೋಟಿ ರೂ. ಹಣವನ್ನು ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳಿಗೆ ವರ್ಗಾವಣೆ ಮಾಡಿದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ದಲಿತ ವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿ ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು ಮಾತನಾಡಿದರು.
ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ ಶೆಟ್ಟಿ, ಮಾಜಿ ಶಾಸಕ ಕೆ.ರಘುಪತಿ ಭಟ್, ಜಿಲ್ಲಾ ಎಸ್ಸಿ ಮೋರ್ಚಾ ಅಧ್ಯಕ್ಷ ಗೋಪಾಲ ಕಳಂಜಿ ಮತ್ತು ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಗೀತಾಂಜಲಿ ಎಂ. ಸುವರ್ಣ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಎಸ್ಸಿ ಎಸ್ಟಿ ಸಮುದಾಯಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಕಾಂಗ್ರೆಸ್ ಪಕ್ಷದ ಚುನಾವಣಾ ಗ್ಯಾರಂಟಿಗಳಿಗೆ ವರ್ಗಾಯಿಸಿರುವುದು ಸಂವಿಧಾನ ವಿರೋಧಿ ನಡೆಯಾಗಿದೆ ಎಂದರು.
ರಾಜ್ಯ ಸರಕಾರ ತಕ್ಷಣ ನಿಗದಿತ 11,000 ಕೋಟಿ ರೂಪಾಯಿ ಮೊತ್ತವನ್ನು ದಲಿತ ಸಮುದಾಯದ ಅಭಿವೃದ್ಧಿಗಾಗಿ ಮರು ಕಾಯ್ದಿರಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನಾ ಸಭೆಯಲ್ಲಿ ಕುಂದಾಪುರ ಶಾಸಕ ಕಿರಣ್‌ಕುಮಾರ್ ಕೊಡ್ಗಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಸುಪ್ರಸಾದ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾ ಪ್ರ.ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಮುಖಂಡರಾದ ಸತ್ಯಾನಂದ ನಾಯಕ್, ಶಿವಕುಮಾರ ಅಂಬಲಪಾಡಿ, ಶ್ರೀನಿಧಿ ಹೆಗ್ಡೆ, ರಾಘವೇಂದ್ರ ಉಪ್ಪೂರು, ಆನಂದ ಮಟಪಾಡಿ, ನಾರಾಯಣ ಗುಜ್ಜಾಡಿ ಮುಂತಾದವರು ಉಪಸ್ಥಿತರಿದ್ದರು.