ಉಡುಪಿ| ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಪೋಕ್ಸೊ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ, ದಂಡ
ಉಡುಪಿ, ಅ.26: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಪೋಕ್ಸೊ ಪ್ರಕರಣದ ಆರೋಪಿಗೆ 20 ವರ್ಷಗಳ ಕಾಲ ಕಠಿಣ ಶಿಕ್ಷೆ ವಿಧಿಸಿ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸೊ ವಿಶೇಷ ನ್ಯಾಯಾಲಯವು ಇಂದು ಆದೇಶ ನೀಡಿದೆ.
ಶಿವಮೊಗ್ಗ ನಿವಾಸಿ ಶರತ್(27) ಶಿಕ್ಷೆಗೆ ಗುರಿಯಾದ ಆರೋಪಿ. ಈತ ತನ್ನ ಪತ್ನಿ ಮಕ್ಕಳ ಜೊತೆ ಬ್ರಹ್ಮಾವರ ತಾಲೂಕಿನ ನೊಂದ ಬಾಲಕಿಯ ಮನೆಗೆ 2022ರ ಎಪ್ರಿಲ್ ತಿಂಗಳಲ್ಲಿ ಮದುವೆ ಕಾರ್ಯಕ್ರಮಕ್ಕೆ ಬಂದಿದ್ದನು. ಮದುವೆ ಕಾರ್ಯಕ್ರಮ ಬಳಿಕವೂ ಆತ ನೊಂದ ಬಾಲಕಿಯ ಮನೆಯಲ್ಲೇ ವಾಸವಾಗಿದ್ದು, 2023ರ ನವೆಂಬರ್‌ರಲ್ಲಿ ತನ್ನ ಪತ್ನಿ ಮಕ್ಕಳೊಂದಿಗೆ ಶಿವಮೊಗ್ಗಕ್ಕೆ ವಾಪಾಸ್ಸಾಗಿದ್ದನು. ಈ ಮಧ್ಯೆ ಆರೋಪಿಯು ನೊಂದ ಬಾಲಕಿಗೆ ದೈಹಿಕ ದೌರ್ಜನ್ಯ ಎಸಗಿ, ಈ ವಿಚಾರ ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದನು.
ನಂತರ ಬಾಲಕಿಯ ಆರೋಗ್ಯದಲ್ಲಿ ವ್ಯಾತ್ಯಾಸ ಕಂಡುಬಂದಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಪರೀಕ್ಷಿಸಿದಾಗ ಆಕೆ ಗರ್ಭಿಣಿ ಎಂಬುದು ತಿಳಿದುಬಂತು. ಅದರಂತೆ ಬಾಲಕಿಯನ್ನು ವಿಚಾರಿಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ನೊಂದ ಬಾಲಕಿ ನೀಡಿದ ದೂರಿನಂತೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ತನಿಖೆ ನಡೆಸಿದ ಉಡುಪಿ ಮಹಿಳಾ ಪೊಲೀಸ್ ಠಾಣೆಯ ಆಗಿನ ಪೊಲೀಸ್ ನಿರೀಕ್ಷಕ ಜಯಾನಂದ ಕೆ. ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದರು. ನ್ಯಾಯಾಲಯ ಒಟ್ಟು 36 ಸಾಕ್ಷಿಗಳ ಪೈಕಿ 20ಸಾಕ್ಷಿದಾರರ ವಿಚಾರಣೆ ನಡೆಸಿದ್ದು, ಮುಖ್ಯವಾಗಿ ನೊಂದ ಬಾಲಕಿಯ ಸಾಕ್ಷಿ ಮತ್ತು ಡಿಎನ್‌ಎ ವರದಿಯಲ್ಲಿ ಆರೋಪಿಯು ಬಾಲಕಿಯ ಗರ್ಭಕ್ಕೆ ಕಾರಣವಾಗಿರುವ ಪೂರಕ ಸಾಕ್ಷಿಯನ್ನು ಪರಿಗಣಿಸಿ, ನ್ಯಾಯಾಧೀಶ ಶ್ರೀನಿವಾಸ ಸುವರ್ಣ, ಆರೋಪಿ ಮೇಲಿನ ಆರೋಪ ಸಾಬೀತಾಗಿದೆ ಎಂದು ಅಭಿಪ್ರಾಯ ಪಟ್ಟರು.
ಅದರಂತೆ ನ್ಯಾಯಾಲಯ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ 21ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದೆ. ದಂಡ ಮೊತ್ತದಲ್ಲಿ 15ಸಾವಿರ ರೂ. ನೊಂದ ಬಾಲಕಿಗೆ ಮತ್ತು 6ಸಾವಿರ ರೂ. ಸರಕಾರಕ್ಕೆ ಪಾವತಿಸುವಂತೆ ಮತ್ತು ಸರಕಾರದಿಂದ ನೊಂದ ಬಾಲಕಿಗೆ 2ಲಕ್ಷ ರೂ. ಪರಿಹಾರ ನೀಡಬೇಕೆಂದು ಆದೇಶ ನೀಡಿದೆ.
ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ವಾದ ಮಂಡಿಸಿದ್ದರು. 2023ರ ಡಿಸೆಂಬರ್ ನಲ್ಲಿ ದೋಷಾರೋಪಣಾ ಪಟ್ಟಿ ಸಲ್ಲಿಸಿಲಾಗಿದ್ದು, ಕೇವಲ 10 ತಿಂಗಳೊಳಗೆ ಪ್ರಕರಣ ಇತ್ಯರ್ಥ ಪಡಿಸಲಾಗಿದೆ.