ಉಡುಪಿ ಮಹಾಲಕ್ಷ್ಮೀ ಬ್ಯಾಂಕ್ ಕೋಟ್ಯಂತರ ರೂ. ಅವ್ಯವಹಾರ ಪ್ರಕರಣ: ಸರಕಾರ ಮಧ್ಯಪ್ರವೇಶಿಸಲು ಬಿ.ಕೆ.ಹರಿಪ್ರಸಾದ್ ಆಗ್ರಹ
ಬೆಂಗಳೂರು: ಉಡುಪಿ ಜಿಲ್ಲೆಯ ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕಿನಲ್ಲಿ ನಡೆದಿರುವ ಭಾರಿ ಅವ್ಯವಹಾರದ ಹಿನ್ನೆಲೆಯಲ್ಲಿ ಗ್ರಾಹಕರಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಸರಕಾರ ಮಧ್ಯಪ್ರವೇಶಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಆಗ್ರಹಿಸಿದ್ದಾರೆ.
ಉಡುಪಿ ಮಲ್ಪೆಯ ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕಿನಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು, ಬ್ಯಾಂಕಿನ ಅಮಾಯಕ ಗ್ರಾಹಕರು ಅನ್ಯಾಯಕ್ಕೆ ಒಳಗಾಗಿದ್ದಾರೆ. ಸುಮಾರು 1,413 ಗ್ರಾಹಕರು ತಲಾ 20 ಸಾವಿರ ರೂ.ನಂತೆ ಸಾಲ ಪಡೆದಿದ್ದಾರೆ. ಆದರೆ ನಕಲಿ ದಾಖಲೆಗಳನ್ನು ಸೃಷ್ಟಿಸಿ 2 ಲಕ್ಷ ರೂ. ಸಾಲ ಪಡೆದಿರುವುದಾಗಿ ದಾಖಲೆಗಳನ್ನು ಸೃಷ್ಟಿಸಿ ಬರೋಬ್ಬರಿ 20 ಕೋಟಿ ರೂ.ಗೂ ಹೆಚ್ಚು ಅವ್ಯವಹಾರ ನಡೆದಿರುವ ಆರೋಪಗಳು ಕೇಳಿ ಬರುತ್ತಿವೆ. ನೂರಾರು ಗ್ರಾಹಕರು ತಾವು ಪಡೆದುಕೊಂಡ ಸಾಲದ ಹಣಕ್ಕಿಂತಲೂ ಹೆಚ್ಚಿನ ಹಣವನ್ನು ಈಗಾಗಲೇ ಪಾವತಿ ಮಾಡಿದ್ದಾರೆ. ಆದರೂ ಬ್ಯಾಂಕಿನ ಸಿಬ್ಬಂದಿ ದಬ್ಬಾಳಿಕೆ ದೌರ್ಜನ್ಯ ನಡೆಸಿ ಗ್ರಾಹಕರಿಂದ ಮತ್ತಷ್ಟು ಹಣ ಕೀಳುತ್ತಿದ್ದಾರೆಂದು ಗ್ರಾಹಕರು ಅಳಲು ತೋಡಿಕೊಳ್ಳುತ್ತಿದ್ದಾರೆ. ನಕಲಿ ದಾಖಲೆಗಳನ್ನು ಸೃಷ್ಡಿಸಿ ಮೋಸ ಮಾಡಿದ್ದಲ್ಲದೆ ಗ್ರಾಹಕರ ಮೇಲೆಯೇ ದಬ್ಬಾಳಿಕೆ ನಡೆಸುತ್ತಿರುವುದು ಅಕ್ಷಮ್ಯ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕಿನಲ್ಲಿ ಈ ಹಿಂದೆಯೂ ಹಲವು ಆರೋಪಗಳು ಕೇಳಿ ಬಂದಿವೆ. ಕಳೆದ ವರ್ಷ ಬ್ಯಾಂಕಿನ ಮ್ಯಾನೇಜರ್ ಕೂಡ ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದು, ಹಲವು ಪ್ರಭಾವಿಗಳ ಕೈವಾಡ ಇರುವುದು ಸ್ಪಷ್ಟವಾಗಿದೆ. ಪ್ರಕರಣವೂ ಗಂಭೀರವಾಗಿದ್ದು ಕೂಡಲೇ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿ, ಅನ್ಯಾಯಕ್ಕೊಳಗಾದ ಗ್ರಾಹಕರಿಗೆ ನ್ಯಾಯ ಒದಗಿಸಿಕೊಡಬೇಕಾಗಿದೆ.ಆದ್ದರಿಂದ ವಿಶೇಷ ಪ್ರಕರಣವೆಂದು ಪರಿಗಣಿಸಿ ಕೂಡಲೇ ಕ್ರಮ ವಹಿಸಬೇಕು ಎಂದು ಬಿ.ಕೆ.ಹರಿಪ್ರಸಾದ್ ಒತ್ತಾಯಿಸಿದ್ದಾರೆ.