ಉಡುಪಿ: ಸಾಮೂಹಿಕ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮ
ಉಡುಪಿ, ಸೆ.15: ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಏಕಕಾಲದಲ್ಲಿ ಸಂವಿಧಾನ ಪೀಠಿಕೆಯನ್ನು ಸಾಮೂಹಿಕವಾಗಿ ಓದುವ ಕಾರ್ಯಕ್ರಮವನ್ನು ಇಂದು ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಏಕಕಾಲದಲ್ಲಿ ರಾಜ್ಯಾದ್ಯಂತ ಸಂವಿಧಾನ ಪೀಠಿಕೆಯನ್ನು ಸಾಮೂಹಿಕವಾಗಿ ಓದುವುದರ ಮೂಲಕ ವಿಶ್ವದಾಖಲೆಯನ್ನು ನಿರ್ಮಿಸಲು ಯೋಜನೆಯಂತೆ ಈ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಸಂವಿಧಾನದ ಪೀಠಿಕೆಯನ್ನು ವಾಚಿಸಿದರು. ಅದರಂತೆ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ವಿದ್ಯಾರ್ಥಿಗಳು, ಸಾರ್ವಜನಿಕರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸೇರಿದಂತೆ ಸಾವಿರಾರು ಮಂದಿ ಸಂವಿಧಾನದ ಪೀಠಿಕೆಯನ್ನು ಓದಿದರು.
ಕಾರ್ಯಕ್ರಮದಲ್ಲಿ ಜಿ.ಪಂ ಸಿಇಓ ಪ್ರಸನ್ನ ಎಚ್., ನ್ಯಾಯಾಧೀಶೆ ಶರ್ಮಿಳಾ, ಹೆಚ್ಚುವರಿ ಎಸ್ಪಿ ಸಿದ್ಧಲಿಂಗಯ್ಯ, ಡಿವೈಎಸ್ಪಿ ದಿನಕರ್, ಸರಕಾರಿ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ, ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಡಾ.ಸುಮಾ ಮೊದಲಾದವರು ಉಪಸ್ಥಿತರಿದ್ದರು.
ಡಾ.ರೋಶನ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು ವಂದಿಸಿದರು.
ಅದೇ ರೀತಿ ಜಿಲ್ಲೆಯ ಎಲ್ಲಾ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶೈಕ್ಷಣಿಕ ಸಂಸ್ಥೆಗಳು, ಮಣಿಪಾಲ ಮಾಹೆ, ಸರಕಾರಿ, ಅರೆ ಸರಕಾರಿ, ನಿಗಮ ಮಂಡಳಿಗಳು, ಗ್ರಾಪಂ ಕೇಂದ್ರಗಳಲ್ಲಿ ಸಿಬ್ಬಂದಿ, ಸಾರ್ವಜನಿಕರು, ಸಂಘ ಸಂಸ್ಥೆಗಳು, ಕೈಗಾರಿಕೆಗಳಲ್ಲಿ ಕಾರ್ಮಿಕರು, ನೌಕರರು ಹಾಗೂ ಧಾರ್ಮಿಕ ಕೇಂದ್ರಗಳಲ್ಲಿಯೂ ಏಕಕಾಲದಲ್ಲಿ ಸಂವಿಧಾನ ಪೀಠಿಕೆಯನ್ನು ಓದಲಾಯಿತು.