ಉಡುಪಿಯಲ್ಲಿ ತಾಯಿ, ಮಕ್ಕಳ ಕಗ್ಗೊಲೆ ಪ್ರಕರಣ: ಆರೋಪಿ ಪ್ರವೀಣ್ ಚೌಗುಲೆ ನ್ಯಾಯಾಂಗ ಬಂಧನ ವಿಸ್ತರಣೆ
ಉಡುಪಿ, ಡಿ.5: ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಬಂಧಿತ ಆರೋಪಿ ಪ್ರವೀಣ್ ಅರುಣ್ ಚೌಗುಲೆ(39)ಯ ನ್ಯಾಯಾಂಗ ಬಂಧನ ಅವಧಿಯನ್ನು 14 ದಿನಗಳ ಕಾಲ ವಿಸ್ತರಿಸಿ ಉಡುಪಿ ನ್ಯಾಯಾಲಯ ಆದೇಶಿಸಿದೆ.
ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಪ್ರವೀಣ್ ಚೌಗುಲೆಯನ್ನು ಪೊಲೀಸರು ನ.22ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಿ, ಡಿ.5ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇಂದಿಗೆ ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.
ನ್ಯಾಯಾಧೀಶೆ ದೀಪಾ ಆರೋಪಿಗೆ ಮತ್ತೆ 14 ದಿನಗಳ ಕಾಲ ಅಂದರೆ ಡಿ.18ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದರು. ಈ ಸಂದರ್ಭದಲ್ಲಿ ಹಿರಿಯ ಸಹಾಯಕ ಪಬ್ಲಿಕ್ ಪ್ರಾಸಿಕ್ಯುಟರ್ ಎಚ್.ಎಂ.ನದಾಫ್ ಮತ್ತು ಆರೋಪಿ ಪರ ನ್ಯಾಯಾಲಯ ನೇಮಿಸಿದ ಸರಕಾರಿ ವಕೀಲ ರಾಜು ಪೂಜಾರಿ ಹಾಜರಿದ್ದರು. ಆರೋಪಿ ಇನ್ನೂ ಕೂಡ ಖಾಸಗಿ ವಕೀಲರನ್ನು ನೇಮಕ ಮಾಡಿ ಕೊಂಡಿಲ್ಲ ಎಂದು ತಿಳಿದುಬಂದಿದೆ.
ಮಂಗಳೂರು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಉದ್ಯೋಗಿಯಾಗಿದ್ದ ಪ್ರವೀಣ್ ಚೌಗುಲೆ ನ.12ರಂದು ನೇಜಾರಿನ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದನು. ತನಿಖೆ ನಡೆಸಿದ ಪೊಲೀಸರು ನ.14ರಂದು ಬೆಳಗಾವಿಯಲ್ಲಿ ಆರೋಪಿಯನ್ನು ಬಂಧಿಸಿದ್ದರು. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.