ಉಡುಪಿ: ಗ್ರಂಥಾಲಯದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ

Update: 2023-11-06 16:18 GMT

ಉಡುಪಿ: ರಾಷ್ಟ್ರೀಯ ಗ್ರಂಥಾಲಯದ ಸಪ್ತಾಹದ ಅಂಗವಾಗಿ ನಗರದ ವಿದ್ಯಾವಾಚಸ್ಪತಿ ಡಾ.ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದಲ್ಲಿ ಇಂದು ವಿದ್ಯಾರ್ಥಿಗಳಿಗಾಗಿ ಕನ್ನಡ ಪುಸ್ತಕ ಓದಿ ಗ್ರಹಣ ಶಕ್ತಿ ಬೆಳೆಸುವ ಸ್ಪರ್ಧೆ, ಚಿತ್ರ ಬಿಡಿಸುವ ಸ್ಪರ್ಧೆ ಮತ್ತು ಪ್ರಬಂಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಅಜ್ಜರಕಾಡಿನ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಧ್ಯಾಪಕಿ ಹಾಗೂ ಸಾಹಿತಿ ಗಿರಿಜಾ ಹೆಗಡೆ ಗಾಂವ್ಕರ್ ಮತ್ತು ಹಿರಿಯ ಸಾಹಿತಿ ಸಂಗೀತಾ ಜಾನ್ಸನ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಗಿರಿಜಾ ಹೆಗಡೆ ಗಾಂವ್ಕರ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಓದು ಎಂಬುದು ಪ್ರೇರಕ ಶಕ್ತಿ. ಪಠ್ಯ-ಪಠ್ಯೇತರ ಪುಸ್ತಕಗಳನ್ನು ಓದುವುದನ್ನು ರೂಢಿಸಿಕೊಂಡಾಗ ಸಾಹಿತ್ಯದ ಅಭಿರುಚಿ ಬೆಳೆಯುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಪುಸ್ತಕ ಮತ್ತು ಪತ್ರಿಕೆಗಳನ್ನು ಓದುವುದನ್ನು ಅಭ್ಯಾಸ ಮಾಡಿ ಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಸಂಗೀತಾ ಜಾನ್ಸನ್ ಮಾತನಾಡಿ, ವಿದ್ಯಾರ್ಥಿಗಳು ಬಾಲ್ಯದಲ್ಲಿಯೇ ಓದುವುದನ್ನು ಹವ್ಯಾಸವನ್ನಾಗಿಸಿಕೊಳ್ಳಬೇಕು. ಅದು ಮನಸ್ಸನ್ನು ಉಲ್ಲಾಸಿತ ಗೊಳಿಸುವ ಜೊತೆಗೆ ಜ್ಞಾನವನ್ನು ಹೆಚ್ಚಿಸುತ್ತದೆ. ಗ್ರಂಥಾಲಯ ಓದುವ ಸ್ಪರ್ಧೆಗಳನ್ನು ಏರ್ಪಡಿಸುವ ಮೂಲಕ ಓದುವ ಕಲೆಯನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಕಾರ್ಯ ಮಾಡುತ್ತಿರುವುದನ್ನು ಪ್ರಶಂಸಿಸಿದರು.

ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಗ್ರಂಥಪಾಲಕರಾದ ಸಿ. ರಂಜಿತ ಕಾರ್ಯಕ್ರಮ ನಿರೂಪಿಸಿ, ಸಹಾಯಕಿ ಶಕುಂತಳ ಕುಂದರ್ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News