ತಿಂಗಳ ಹಿಂದೆ ಆಗುಂಬೆಯಲ್ಲಿ ಸಂಘ ಪರಿವಾರದ ಕಾರ್ಯಕರ್ತರಿಂದ ಅನೈತಿಕ ಪೊಲೀಸ್ ಗಿರಿ: ಕಾಪು ಠಾಣೆಯಲ್ಲಿ ಪ್ರಕರಣ ದಾಖಲು

Update: 2023-09-21 17:15 GMT

ಕಾಪು: ಒಂದು ತಿಂಗಳ ಹಿಂದೆ ಆಗುಂಬೆಯಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿಯ ವಿಡಿಯೋ ಇದೀಗ ವೈರಲ್ ಆಗಿದ್ದು, ಈ ಸಂಬಂಧ ಯುವತಿಯ ಸಹೋದರ ನೀಡಿರುವ ದೂರಿನಂತೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಪು ಪೊಲೀಸ್ ಠಾಣೆ ವ್ಯಾಪ್ತಿಯ ಕಾಲೇಜಿನ ವಿದ್ಯಾರ್ಥಿಗಳಿಬ್ಬರು ಒಂದು ತಿಂಗಳ ಹಿಂದೆ ಬೈಕ್ ನಲ್ಲಿ ಆಗುಂಬೆಯ ಜಲಪಾತಕ್ಕೆ ತೆರಳಿದ್ದರು. ಅಲ್ಲಿಂದ ವಾಪಸ್ ಬರುತ್ತಿದ್ದ ವಿದ್ಯಾರ್ಥಿಗಳ ಬೈಕ್ ಅನ್ನು ತಡೆದ ಸ್ಥಳೀಯ ಸಂಘ ಪರಿವಾರದ ಕಾರ್ಯಕರ್ತರು ಅನೈತಿಕ ಪೊಲೀಸ್ ಗಿರಿ ನಡೆಸಿದ್ದಾರೆಂದು ದೂರಲಾಗಿದೆ.

ಇದೇ ವೇಳೆ ಸಂಘ ಪರಿವಾರದ ಕಾರ್ಯಕರ್ತರು ವಿದ್ಯಾರ್ಥಿ, ವಿದ್ಯಾರ್ಥಿನಿಯ ವಿಡಿಯೋವನ್ನು ತಮ್ಮ ಮೊಬೈಲ್ ಗಳಲ್ಲಿ ಚಿತ್ರೀಕರಣ ಮಾಡಿದ್ದರು. ಇದೀಗ ಈ ವಿಡಿಯೋವನ್ನು ತಿಂಗಳ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಟ್ಟಿದ್ದು ಸಾಕಷ್ಟು ವೈರಲ್ ಆಗುತ್ತಿದೆ.

ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯ ಸಹೋದರ ಕಾಪು ಪೊಲೀಸ್ ಠಾಣೆಗೆ ದೂರು ನೀಡಿದ್ದು ಅದರಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೈಕ್‌ನಲ್ಲಿ ತೆರಳುತ್ತಿದ್ದ ಭಿನ್ನ ಸಮುದಾಯದ ಹುಡುಗ-ಹುಡುಗಿಯನ್ನು ಕೆಲವರು ತಡೆದು ವಿಡಿಯೋ ಮಾಡಿದ್ದು, ಇದಕ್ಕೆ ಸಂಬಂಧಿಸಿದಂತೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿ ಸಹೋದರನ ದೂರಿನ ಮೇರೆಗೆ ಕಲಂ 143 147 341 505(2) 354D r/w 149 IPC. ಪ್ರಕರಣ ದಾಖಲಿಸಿ ಕಾನೂನು ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ತಿಳಿಸಿದ್ದಾರೆ

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News