ಸೌಜನ್ಯ ಪ್ರಕರಣದಲ್ಲಿ ನ್ಯಾಯ ಸಿಗದಿದ್ದರೆ ವಿಧಾನಸೌಧ ಚಲೋ: ಮಹೇಶ್ ಶೆಟ್ಟಿ ತಿಮರೋಡಿ

Update: 2023-08-29 15:45 GMT

ಉಡುಪಿ, ಆ.29: ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಬಗ್ಗೆ ಮರು ತನಿಖೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆ ವಿಧಿಸಬೇಕು. ಇದರ ವಿರುದ್ಧ ಸೆ.3ರಂದು ಬೆಳ್ತಂಗಡಿ ಚಲೋ ಹಮ್ಮಿಕೊಳ್ಳಲಾಗಿದೆ. ಒಂದು ವೇಳೆ ನ್ಯಾಯ ಸಿಗದಿದ್ದರೆ ಮೂರು ತಿಂಗಳೊಳಗೆ ರಾಜ್ಯದ ಬೇರೆ ಬೇರೆ ಜಿಲ್ಲೆ ಗಳಿಂದ ವಿಧಾನಸೌಧ ಚಲೋ ನಡೆಸಲಾಗುವುದು ಎಂದು ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಎಚ್ಚರಿಕೆ ನೀಡಿದ್ದಾರೆ.

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆ ಮಾಡುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಸೌಜನ್ಯ ಹೋರಾಟ ಸಮಿತಿಯ ನೇತೃತ್ವದಲ್ಲಿ ಮಂಗಳವಾರ ಅಜ್ಜರಕಾಡು ಸೈನಿಕರ ಹುತಾತ್ಮ ಸ್ಮಾರಕ ಬಳಿ ಹಮ್ಮಿಕೊಳ್ಳಲಾದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡುತಿದ್ದರು.

11 ವರ್ಷಗಳಾದರೂ ಈ ಪ್ರಕರಣದಲ್ಲಿ ನ್ಯಾಯ ದೊರಕಿಸದೆ ಇಡೀ ವ್ಯವಸ್ಥೆಯು ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡಿದೆ. ಹಾಡುಹಗಲೇ ನಡೆದ ಅತ್ಯಾಚಾರ ಪ್ರಕರಣದ ನಿಜವಾದ ಆರೋಪಿಗಳನ್ನು ಪತ್ತೆ ಹಚ್ಚಲು ಸಾಧ್ಯ ವಾಗದೇ ಇರುವುದು ನಾವು ಸ್ವಾತಂತ್ರ್ಯ ಭಾರತದಲ್ಲಿ ಇದ್ದೇವೆಯೇ ಎಂಬ ಭಾವನೆ ಮೂಡುವಂತೆ ಮಾಡುತ್ತಿದೆ. ಪ್ರಕರಣದ ನಿಜವಾದ ಆರೋಪಿಗಳು ಸಿಗುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದರು.

ನಮ್ಮ ಹೋರಾಟ ಶಾಂತಾ ರೀತಿಯಲ್ಲಿ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಲಕ್ಷ ಕೋಟಿ ಮಂದಿ ಬೀದಿಗೆ ಇಳಿದು ಹೋರಾಟ ನಡೆಸಲಿದ್ದೇವೆ. ಇದು ಪ್ರಧಾನ ಮಂತ್ರಿ, ಮುಖ್ಯಮಂತ್ರಿ, ಗೃಹಸಚಿವರು, ಎಲ್ಲ ಇಲಾಖಾಧಿಕಾರಿಗಳಿಗೆ ನೀಡುತ್ತಿ ರುವ ಎಚ್ಚರಿಕೆಯಾಗಿದೆ. ಆದುದರಿಂದ ಪ್ರಕರಣದ ಮರುತನಿಖೆಗೆ ನಡೆಸಿ ಆರೋಪಿಗಳನ್ನು ಶಿಕ್ಷೆಗೆ ಗುರಿಪಡಿಸಬೇಕೆಂದು ಅವರು ಒತ್ತಾಯಿಸಿದರು.

ಸೌಜನ್ಯಳ ತಾಯಿ ಕುಸುಮಾವತಿ ಮಾತನಾಡಿ, ಸೌಜನ್ಯಳನ್ನು ಇಡೀ ದೇಶವೇ ಮಗಳು ಎಂದು ಹೇಳಿಕೊಳ್ಳುತ್ತಿದೆ. ಆದುದರಿಂದ ನನಗೆ ಈ ದೇಶದ ಜನರ ಮೇಲೆ ನಂಬಿಕೆ ಇದೆ. ಜನರೇ ನನ್ನ ಮಗಳಿಗೆ ನ್ಯಾಯ ಒದಗಿಸುವ ಕಾರ್ಯ ಮಾಡಲಿದ್ದಾರೆ ಎಂದು ಕಣ್ಣೀರಿಟ್ಟರು.

ಚಿಂತಕ ತಮ್ಮಣ್ಣ ಶೆಟ್ಟಿ ಮಾತನಾಡಿದರು. ವಕೀಲೆ ಅಂಬಿಕಾ ಪ್ರಭು ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಮಾಂಜಿ ನಮ್ಮಭೂಮಿ ಕಾರ್ಯಕ್ರಮ ನಿರೂಪಿಸಿದರು. ಇದಕ್ಕೂ ಮುನ್ನ ಉಡುಪಿ ಶ್ರೀಕೃಷ್ಣನಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ, ನಂತರ ಪಾದಯಾತ್ರೆ ಮೂಲಕ ಅಜ್ಜರಕಾಡಿಗೆ ಆಗಮಿಸಲಾಯಿತು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News