ಮಣಿಪಾಲ| ಸ್ಕೂಟರ್‌ನಲ್ಲಿ ಅಪಾಯಕಾರಿ ವೀಲಿಂಗ್: ಸವಾರನ ಬಂಧನ
ಮಣಿಪಾಲ: ಸ್ಕೂಟರಿನಲ್ಲಿ ಅಪಾಯಕಾರಿ ರೀತಿಯಲ್ಲಿ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ಆತ್ರಾಡಿಯ ಮುಹಮ್ಮದ್ ಆಶಿಕ್(19) ಬಂಧಿತ ಆರೋಪಿ. ಈತ ಸ್ಕೂಟರಿನ ಹಿಂಬದಿಯಲ್ಲಿ ಇನ್ನೊಬ್ಬ ವ್ಯಕ್ತಿಯನ್ನು ಕೂರಿಸಿಕೊಂಡು ಮಣಿಪಾಲ ರಾಷ್ಟ್ರೀಯ ಹೆದ್ದಾರಿ 169 ಎ ಮತ್ತು ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ಮಾನವ ಜೀವಕ್ಕೆ ಅಪಾಯ ಉಂಟು ಮಾಡುವ ರೀತಿಯಲ್ಲಿ ವಿಲೀಂಗ್ ಮಾಡಿದ್ದು, ಈ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದನು.
ಜ.4ರಂದು ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಮಣಿಪಾಲ ಪೊಲೀಸ್ ನಿರೀಕ್ಷಕ ದೇವರಾಜ್ ಟಿ.ವಿ ನೇತೃತ್ವದ ಪೊಲೀಸ್ ಉಪ ನಿರೀಕ್ಷಕರಾದ ಅನೀಲ್, ಅಕ್ಷಯ ಕುಮಾರಿ, ಸಿಬ್ಬಂದಿಗಳಾದ ವಿವೇಕ್, ಪ್ರಸನ್ನ, ಇಮ್ರಾನ್, ಸುರೇಶ್ ಶೆಟ್ಟಿ ಹಾಗೂ ಸುಕುಮಾರ್ ಶೆಟ್ಟಿ, ರುದ್ರವ್ವ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.
ಆರೋಪಿಯಿಂದ ವೀಲಿಂಗ್ ಮಾಡಲು ಬಳಸಿದ ಸ್ಕೂಟರ್‌ನ್ನು ವಶಪಡಿಸಿ ಕೊಳ್ಳಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈತನ ವಿರುದ್ಧ ಈ ಹಿಂದೆ ಮಣಿಪಾಲ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿತ್ತು.