ತಮ್ಮ ಸಾಮರ್ಥ್ಯ ಅರಿತು ಅದರಂತೆ ಬದುಕಿ: ಡಾ.ಜೆನ್ನಿಫರ್
ಉಡುಪಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಉಡುಪಿ ಜಿಲ್ಲೆ ಇವರ ವತಿಯಿಂದ ಹಿರ್ಗಾನದ ಕ್ರಿಯೆಟೆವ್ ಪಿ.ಯು ಕಾಲೇಜಿನಲ್ಲಿ ಇತ್ತೀಚೆಗೆ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆಯನ್ನು ಆಚರಿಸಲಾಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಕ್ಲಿನಿಕಲ್ ಸೈಕಾಲಜಿಸ್ಟ್ ಕ್ಯಾಥರೀನ್ ಜೆನ್ನಿಫರ್ ಮಾತನಾಡಿ, ಸ್ಫರ್ಧಾತ್ಮಕ ಯುಗದಲ್ಲಿ ನಮ್ಮ ಸಾಮರ್ಥ್ಯವೇನು ಎಂಬುದನ್ನು ಅರಿತು ಅದರಂತೆ ಜೀವಿಸಬೇಕು. ಬೇರೆಯವರ ಜೀವನಶೈಲಿಯನ್ನು ಅನುಸರಿಸದೇ ಸಕಾರಾತ್ಮಕ ಮನೋಭಾವ, ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿ ಕೊಳ್ಳಬೇಕು ಎಂದರು.
ಕಾರ್ಕಳ ತಾಲೂಕು ಆರೋಗ್ಯಾಧಿಕಾರಿ ಡಾ. ಸಂದೀಪ್ ಕುಡ್ವ ಪ್ರಾಸಾವ್ತಿಕ ವಾಗಿ ಮಾತನಾಡಿ, ಮಾನಸಿಕ ಸಮತೋಲನ ಕಾಯ್ದುಕೊಳ್ಳುವಿಕೆಯಿಂದ ಆತ್ಮಹತ್ಯೆಯಂತಹ ಘಟನೆಗಳನ್ನು ತಡೆಗಟ್ಟಲು ಸಾಧ್ಯ ಎಂದರು.
ಪ್ರಭಾರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಎಚ್, ವೈಜ್ಞಾನಿಕ ಚಿಕಿತ್ಸಾ ಪದ್ಧತಿಗಳಿಗೆ ಹೊಂದಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದರು. ಕಾಲೇಜಿನ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಆತ್ಮಹತ್ಯೆ ತಡೆಗಟ್ಟುವಲ್ಲಿ ಸಮುದಾಯದ ಪಾತ್ರ ಎಂಬ ವಿಷಯದ ಕುರಿತು ಕರಪತ್ರ ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಹಿರ್ಗಾನ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಮಾ, ಆಶಾ ಕಾರ್ಯಕರ್ತೆ ಸುಜಾತ, ಬೋಧಕ ಮತ್ತು ಬೋಧಕೇತರ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಅರ್ಥಶಾಸ್ತ್ರ ಉಪನ್ಯಾಸಕ ಉಮೇಶ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.