ಎಸೆಸೆಲ್ಸಿಯಲ್ಲಿ ವಿಜಯನಗರ ಜಿಲ್ಲೆ ಕಳಪೆ ಸಾಧನೆ | ಡಿಡಿಪಿಐ, ಬಿಇಒ ಅಮಾನತಿಗೆ ಸಿಎಂ ಸೂಚನೆ

Update: 2024-06-21 14:39 GMT

ವಿಜಯನಗರ : ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಶೈಕ್ಷಣಿಕವಾಗಿ ವಿಜಯನಗರ ಜಿಲ್ಲೆ 10ನೆ ಸ್ಥಾನದಿಂದ 27ನೆ ಸ್ಥಾನಕ್ಕೆ ಕುಸಿದಿರುವುದಕ್ಕೆ ತೀವ್ರ ಸಿಟ್ಟಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಡಿಪಿಐ ಹಾಗೂ ಬಿಇಒ ಅವರನ್ನು ಅಮಾನತು ಮಾಡುವಂತೆ ಶಿಕ್ಷಣ ಇಲಾಖೆಯ ಕಾರ್ಯದರ್ಶಿಗೆ ಸೂಚನೆ ನೀಡಿದರು.

ಶುಕ್ರವಾರ ವಿಜಯನಗರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಶೈಕ್ಷಣಿಕವಾಗಿ ವಿಜಯನಗರ ಜಿಲ್ಲೆ ಕುಸಿದಿರುವುದಕ್ಕೆ ನಿಮ್ಮನ್ನು ಏಕೆ ಹೊಣೆ ಮಾಡಬಾರದು?. ಎಸೆಸೆಲ್ಸಿಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಪ್ರಮಾಣ ಕುಸಿದಿರುವುದಕ್ಕೆ ನೀವೇ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಿಮ್ಮ ಬಿಇಒಗಳು, ಶಿಕ್ಷಕರ ಪ್ರಯತ್ನ ಏನು? ಯಾವ ದಿಕ್ಕಿನಲ್ಲಿದೆ? ಈ ಕಳಪೆ ಸಾಧನೆಗೆ ನಿಮ್ಮ ಮೇಲೆ ಏನು ಕ್ರಮ ತೆಗೆದುಕೊಳ್ಳಬೇಕು ಎಂದು ನೀವೇ ಹೇಳಿ ಎಂದು ಡಿಡಿಪಿಐಗೆ ಪ್ರಶ್ನಿಸಿದ ಮುಖ್ಯಮಂತ್ರಿ, ಈ ಬಾರಿ ಶೇ.20ರಷ್ಟು ಗ್ರೇಸ್ ಅಂಕಗಳನ್ನು ಕೊಟ್ಟರೂ ಈ ಮಟ್ಟಕ್ಕೆ ಕುಸಿದಿದ್ದೀರಿ ಎಂದರೆ ನಿಮ್ಮ ಒಟ್ಟು ಸಾಧನೆ ಬಗ್ಗೆ ನಿಮಗೆ ಸಮಾಧಾನ ಇದೆಯೇ ಎಂದು ಪ್ರಶ್ನಿಸಿದರು.

10 ರಿಂದ 27ನೆ ಸ್ಥಾನಕ್ಕೆ ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಜಾರಿರುವಾಗ ನಿಮಗೆ ನಾಚಿಕೆ ಆಗಬೇಕಲ್ವಾ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನು ಪ್ರಶ್ನಿಸಿದ ಸಿದ್ದರಾಮಯ್ಯ, ಸಭೆ ಮಧ್ಯದಲ್ಲೆ ಶಿಕ್ಷಣ ಇಲಾಖೆ ಕಾರ್ಯದರ್ಶಿ ರಿತೀಶ್ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಜಿಲ್ಲೆಯ ಕಳಪೆ ಸಾಧನೆ ಬಗ್ಗೆ ಪ್ರಶ್ನಿಸಿದರು. ಅಲ್ಲದೆ, ಡಿಡಿಪಿಐ ಮತ್ತು ಬಿಇಒ ಇಬ್ಬರನ್ನೂ ತಕ್ಷಣದಿಂದ ಅಮಾನತ್ತಿನಲ್ಲಿ ಇಡಬೇಕು. ಸಿಇಒ ಅವರಿಗೆ ನೋಟಿಸ್ ನೀಡಬೇಕು ಎಂದು ಸೂಚಿಸಿದರು.

ಜಿಲ್ಲೆಯ ಶೈಕ್ಷಣಿಕ ಪ್ರಗತಿ ಬಗ್ಗೆ ಗಂಭೀರವಾಗಿ ಯೋಜನೆಗಳನ್ನು ರೂಪಿಸುವಂತೆ ಮುಖ್ಯಮಂತ್ರಿ ಸೂಚಿಸಿದರು. ಬಳಿಕ ಡಿಡಿಪಿಐ ಅವರನ್ನು ಉಸ್ತುವಾರಿ ಸಚಿವ ಝಮೀರ್ ಅಹ್ಮದ್ ಸಭೆಯಿಂದ ಹೊರಗೆ ಹೋಗುವಂತೆ ಸೂಚಿಸಿದರು.

ರಾಜ್ಯದ ಸರಾಸರಿಗೆ ಹೋಲಿಸಿದರೆ ಜಿಲ್ಲೆಯ ಹಾಸ್ಟೆಲ್ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಕಡಿಮೆ ಆಗಿದ್ದು ಏಕೆ ?. ಯಾವ ವಿಷಯಗಳಲ್ಲಿ ವಿದ್ಯಾರ್ಥಿಗಳು ದುರ್ಬಲರಾಗಿದ್ದಾರೆ? ಆ ವಿಷಯಗಳಲ್ಲಿ ಪ್ರತ್ಯೇಕ ಕೋಚಿಂಗ್ ವ್ಯವಸ್ಥೆ ಮಾಡಿದ್ದೀರಾ? ಎಷ್ಟು ಮಂದಿ ವಿದ್ಯಾರ್ಥಿಗಳು ರಾತ್ರಿ ಹಾಸ್ಟೆಲ್‍ಗಳಲ್ಲಿ ಉಳಿಯುತ್ತಾರೆ? ಯಾವ ಯಾವ ಅಧಿಕಾರಿ ಯಾವ ಯಾವ ಹಾಸ್ಟೆಲ್‍ಗಳಿಗೆ ಭೇಟಿ ನೀಡಿದ್ದೀರಿ ? ಎಂದು ಅವರು ಪ್ರಶ್ನಿಸಿದರು.

ಬಾಲ್ಯ ವಿವಾಹಗಳನ್ನು ತಡೆಯಲೇಬೇಕು: ಬಾಲ್ಯ ವಿವಾಹಗಳು ಮತ್ತು ಬಾಲ್ಯದಲ್ಲೇ ಹೆಣ್ಣು ಮಕ್ಕಳು ಗರ್ಭಿಣಿಯರಾಗುತ್ತಿರುವ ಪ್ರಕರಣಗಳ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಗಂಭೀರವಾಗಿ ಪರಿಗಣಿಸಿ ಇದನ್ನು ಸಂಪೂರ್ಣವಾಗಿ ತಡೆಗಟ್ಟಬೇಕು. ಬಾಲ್ಯ ವಿವಾಹಗಳನ್ನು ತಡೆಗಟ್ಟುವ ಜೊತೆಗೆ ಅವರಿಗೆ ಸೂಕ್ತ ಸಲಹೆಗಳನ್ನು, ತಿಳಿವಳಿಕೆಗಳನ್ನು ನೀಡಬೇಕು. ಕೆಳ ವರ್ಗ ಮತ್ತು ಅನಕ್ಷರಸ್ಥ ಸಮುದಾಯ ಇರುವ ಕಡೆಗಳಲ್ಲಿ ಈ ಸಮಸ್ಯೆ ಇರುತ್ತವೆ. ಇವನ್ನು ತಡೆಯಲು ಮುಂದಾಗಬೇಕು ಎಂದು ಮುಖ್ಯಮಂತ್ರಿ ಸೂಚನೆ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News