ಸುರಪುರ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಜಯಭೇರಿ

Update: 2024-06-04 13:51 GMT

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ್ ಅವರು ಬಿಜೆಪಿ ಅಭ್ಯರ್ಥಿ ನರಸಿಂಹ ನಾಯಕ್ (ರಾಜುಗೌಡ) ವಿರುದ್ಧ 18,320 ಮತಗಳ ಭಾರೀ ಅಂತರದಿಂದ ಜಯ ಗಳಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ನಿಧನದ ಹಿನ್ನೆಲೆಯಲ್ಲಿ ತೆರವಾಗಿದ್ದ ಕ್ಷೇತ್ರಕ್ಕೆ ಮೇ 7ರಂದು ಉಪಚುನಾವಣೆ ನಡೆದಿತ್ತು. ಕಾಂಗ್ರೆಸ್ ಅಭ್ಯರ್ಥಿ ವೇಣುಗೋಪಾಲ ನಾಯಕ್-1,14,884 ಮತಗಳನ್ನು ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ ನರಸಿಂಹ ನಾಯಕ್-96,566 ಮತಗಳನ್ನು ಪಡೆದಿದ್ದಾರೆ.

ಸುರಪುರ ಕ್ಷೇತ್ರದ ಉಪಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್, ಪ್ರತಿಪಕ್ಷ ಬಿಜೆಪಿ, ನಾಲ್ವರು ಪಕ್ಷೇತರರು ಸೇರಿದಂತೆ ಒಟ್ಟು ಆರು ಮಂದಿ ಚುನಾವಣಾ ಅಖಾಡದಲ್ಲಿದ್ದರು. ಪಕ್ಷೇತರ ಅಭ್ಯರ್ಥಿಗಳ ಪೈಕಿ ಅಶೋಕ್ 1,612 ಮತಗಳನ್ನು ಪಡೆದಿದ್ದರೆ, ನೋಟಾಗೆ 848 ಮತಗಳು ಚಲಾವಣೆಯಾಗಿವೆ.

ಲೋಕಸಭಾ ಚುನಾವಣೆಯೊಂದಿಗೆ ನಡೆದ ಉಪಚುನಾವಣೆ ಗೆಲುವು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರಕ್ಕೆ ಪ್ರತಿಷ್ಟೆಯೂ ಆಗಿತ್ತು. ಆ ಹಿನ್ನೆಲೆಯಲ್ಲಿ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಂಪುಟ ಸಚಿವರು ಸುರಪುರ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದರು.

ಇದೇ ವೇಳೆ ಆಡಳಿತ ಪಕ್ಷಕ್ಕೆ ಸೆಡ್ಡು ಹೊಡೆಯಲು ಪ್ರತಿಪಕ್ಷ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ಅಭ್ಯರ್ಥಿ ಪರವಾಗಿ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ನಡೆದಿದ್ದರು. ಅಂತಿಮವಾಗಿ ರಾಜಾ ವೆಂಕಟಪ್ಪ ನಾಯಕರ ಪುತ್ರ ಕಾಂಗ್ರೆಸ್‍ನ ರಾಜಾ ವೇಣುಗೋಪಾಲ ನಾಯಕ್ ಜಯಗಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News