ಗರ್ಭಿಣಿ ತಾಯಿ, ಶಿಶು ಮರಣ ಪ್ರಮಾಣ ತಗ್ಗಿಸಲು ಗಮನ ನೀಡಿ : ಸಂಸದ ಜಿ.ಕುಮಾರ್ ನಾಯಕ

Update: 2024-11-30 12:22 GMT

ಯಾದಗಿರಿ : ಜಿಲ್ಲೆಯಲ್ಲಿ ತಾಯಿ-ಶಿಶು ಮರಣ ಪ್ರಮಾಣ ತಗ್ಗಿಸಲು ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು ವಿಶೇಷ ಗಮನ ನೀಡುವಂತೆ ರಾಯಚೂರ ಸಂಸದ ಜಿ.ಕುಮಾರ್ ನಾಯಕ್ ಸೂಚಿಸಿದ್ದಾರೆ.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 'ಕಳೆದ 2024 ರ ಏಪ್ರಿಲ್ ರಿಂದ ಅಕ್ಟೋಬರ್ ಅಂತ್ಯದವರೆಗೆ ಸುಮಾರು 14,000 ಹೆರಿಗೆಗಳಲ್ಲಿ 8 ತಾಯಿಮರಣ ಹಾಗೂ 127 ಶಿಶುಮರಣ ಆಗಿದ್ದು, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸುವಂತೆ ಜಿಲ್ಲೆಯ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ-ಜಲಾನಯನ ಅಭಿವೃದ್ಧಿ ಯೋಜನೆಗಳಡಿ ಜಲಾನಯನ ಅಭಿವೃದ್ಧಿ, ಸ್ವಸಹಾಯ ಗುಂಪುಗಳಿಗೆ ಆವರ್ತನಿಧಿ ಸಮರ್ಪಕ ವಿತರಣೆ, ಬಂಡಿಂಗ್, ಸುಸ್ಥಿತಿಗಳ ಬಗ್ಗೆ ಡಿಸಿ, ಸಿಇಓ ಅವರು ಕಾಲ ಕಾಲಕ್ಕೆ ಪರಿಶೀಲಿಸುವಂತೆ ಸೂಚಿಸಿದರು.

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಹಾಗೂ ಮುಖ್ಯ ಮಂತ್ರಿಗಳ ಸೂಕ್ಷ್ಮ ನೀರಾವರಿ ಕಾರ್ಯಕ್ರಮದಡಿ ಜಿಲ್ಲೆಯ ಸುಮಾರು 6 ಸಾವಿರ ಪರಿಶಿಷ್ಟ ಜಾತಿ ರೈತರಿಗೆ ಡ್ರಿಪ್ ಸ್ಪ್ರೀಂಕ್ಲರ್ ಸಲಕರಣೆ ತಕ್ಷಣ ವಿತರಣೆಗೆ ಕ್ರಮ ಕೈಗೊಳ್ಳಬೇಕು. ರಾಷ್ಟ್ರೀಯ ವಿಕಾಸ, ಮಣ್ಣು ಆರೋಗ್ಯ ಮತ್ತು ಫಲವತ್ತತೆ ಯೋಜನೆಯಡಿ ಎಷ್ಟು ರೈತರಿಗೆ ಲಾಭವಾಗಿದೆ ಎಂಬುದರ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಬೇಕು. ರೈತರಲ್ಲಿ ಹೆಚ್ಚಿನ ಇಳುವರಿ ಬೆಳೆಗಳು, ಮಣ್ಣು ಗುಣಮಟ್ಟದ ಬಗ್ಗೆ ಅರಿವು ಮೂಡಿಸಬೇಕು. ಯಾದಗಿರಿ ರಿಂಗ್ ರೋಡ್ ಜಮೀನು ಸ್ವಾಧೀನ ಸರ್ವೆ ಕಾರ್ಯ ಚುರುಕುಗೊಳಿಸಬೇಕು ಎಂದು ಸೂಚಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರು ಮಾತನಾಡಿ, ಸಿಂದಗಿ -ಕೊಡಂಗಲ್-ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಅಭಿವೃದ್ದಿಪಡಿಸುವ ಹಾಗೂ ಶಹಾಪುರ ಬೈಪಾಸ್ ರಸ್ತೆ ಅಭಿವೃದ್ಧಿಪಡಿಸುವ ಬಗ್ಗೆ ವರದಿ ಸಲ್ಲಿಸಬೇಕು. ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನೆ ಯೋಜನೆ ಬಗ್ಗೆ ಅರಿವು ಮೂಡಿಸಬೇಕು. ಜಲಧಾರೆ ಯೋಜನೆಯಡಿ ಹೆಚ್ಚುವರಿ ಓವರ್ ಹೆಡ್ ಟ್ಯಾಂಕ್ಗಳ ಬೇಡಿಕೆ ವರದಿ ಮೂಲ ಯೋಜನೆಯಲ್ಲಿ ಸೇರಿಸಬೇಕು. ಈ ಕುರಿತು ಹತ್ತು ದಿನದಲ್ಲಿ ವರದಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಅವರು ಮಾತನಾಡಿ, ಎಲ್ಲ ಶಾಲೆಗಳಿಗೆ ಕಂಪೌಂಡ್ ಸೌಲಭ್ಯ, ಯಾದಗಿರಿ ರಿಂಗ್ ರಸ್ತೆಗೆ ಸಂಬಂಧಿಸಿದ ಭೂಸ್ವಾಧೀನ ತಕ್ಷಣ ಆಗಬೇಕು. ಶಾಲೆಯಿಂದ ಮಕ್ಕಳು ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಗುರಮಠಕಲ್ ಶಾಸಕ ಶರಣಗೌಡ ಕಂದಕೂರ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಗರ್ಭಿಣಿ ತಾಯಿ ಮತ್ತು ಶಿಶು ಮರಣ ಗಂಭೀರ ವಿಷಯವಾಗಿದ್ದು, ಈ ಕುರಿತು ಪರಿಣಾಮಕಾರಿ ಕ್ರಮ ಆಗಬೇಕು. ಜಿಲ್ಲೆಗೆ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು. ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಅರ್ಹರಿಗೆ ಸೌಲಭ್ಯ ಕಲ್ಪಿಸಿ, ಪರಂಪರಾಗತ ಕೃಷಿ ವಿಕಾಸ ಯೋಜನೆ, ಸಿಂದಗಿ ಕೊಡಂಗಲ್ ರಾಷ್ಟ್ರೀಯ ಹೆದ್ದಾರಿಯಾಗಿ ಉನ್ನತೀಕರಣಗೊಳಿಸುವ ಯೋಜನೆ ಜಿಲ್ಲೆಯಲ್ಲಿ ಜಾರಿಗೆಗೆ ಕೇಂದ್ರ ಮಟ್ಟದಲ್ಲಿ ಪ್ರಯತ್ನಿಸುವಂತೆ ಸಂಸದರಲ್ಲಿ ಮನವಿ ಮಾಡಿದರು.

ಸಭೆಯಲ್ಲಿ ಶಾಸಕ ರಾಜಾ ವೇಣುಗೋಪಾಲ್ ನಾಯಕ, ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಲವೀಶ ಒರಡಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್, ಅರಣ್ಯ ಸಂರಕ್ಷಣಾಧಿಕಾರಿ ಕಾಜೋಲ್ ಪಾಟೀಲ್, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News