ಯಾದಗಿರಿ | ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಸುಳ್ಳು ಆರೋಪ : ಸಂಜೀವ್ ಐರೆಡ್ಡಿ
ಯಾದಗಿರಿ/ವಡಗೇರಾ : ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಅವರ ಕುಟುಂಬದ ಮೇಲೆ ಸುಳ್ಳು ಆರೋಪ ಮತ್ತು ಅವರ ಮನೆ ಮೇಲೆ ಮುತ್ತಿಗೆ ಹಾಕಿರುವ ಬಿಜೆಪಿ ನಾಯಕರ ನಡೆಯನ್ನು ಕಾಂಗ್ರೆಸ್ ಯುವ ಮುಖಂಡ ಸಂಜೀವ್ ಐರೆಡ್ಡಿ ಬೇಂಡೆಬೆಂಬಳಿ ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಗುತ್ತಿಗೆದಾರ ಸಚಿನ್ ಪಂಚಾಳ ಆತ್ಮಹತ್ಯೆಗೂ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೂ ಯಾವುದೇ ತರನಾದ ಸಂಬಂಧವಿಲ್ಲ ಸಚಿನ್ ಪಂಚಾಳ ತನ್ನ ಡೆತ್ ನೋಟ್ ನಲ್ಲಿ ಪ್ರಿಯಾಂಕ್ ಖರ್ಗೆರವರ ಹೆಸರು ಕೂಡ ಬರೆದಿಲ್ಲ. ಅತಿ ಚಿಕ್ಕ ವಯಸ್ಸಿನಲ್ಲಿಯೇ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಿಯಾಂಕ್ ಖರ್ಗೆರವರ ಏಳಿಗೆ ಸಹಿಸದೆ ಬಿಜೆಪಿಯ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಎನ್.ರವಿಕುಮಾರ್, ಪಿ.ರಾಜೀವ್ ಹಾಗೂ ಇನ್ನಿತರ ಬಿಜೆಪಿ ನಾಯಕರು ಅವರ ಮೇಲೆ ಇಲ್ಲಸಲ್ಲದ ಆರೋಪ ಮಾಡಿ ರಾಜೀನಾಮೆ ಕೇಳುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದರು.
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಖರ್ಗೆ ಕುಟುಂಬದ ಕೊಡುಗೆ ಅಪಾರವಾದದ್ದು, ಈಗಾಗಲೇ ಸಚಿನ್ ಪಂಚಾಳ ಆತ್ಮಹತ್ಯೆ ಪ್ರಕರಣ ಸಿಐಡಿಗೆ ವಹಿಸುವಂತೆ ಸ್ವತಃ ಪ್ರಿಯಾಂಕ್ ಖರ್ಗೆರವರೇ ರಾಜ್ಯದ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಆದರೂ ಕೂಡ ಬಿಜೆಪಿಯವರು ಸಚಿನ್ ಪಂಚಾಳ ಆತ್ಮಹತ್ಯೆ ವಿಷಯದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಇದನ್ನು ಇಲ್ಲಿಗೆ ನಿಲ್ಲಿಸದಿದ್ದಲ್ಲಿ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಭ್ರಷ್ಟಾಚಾರಗಳ ವಿರುದ್ಧ ಕಾಂಗ್ರೆಸ್ ಪಕ್ಷ ಬಿಜೆಪಿ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ ಎಂದು ಕಾಂಗ್ರೆಸ್ ಯುವ ಮುಖಂಡ ಸಂಜೀವ್ ಐರೆಡ್ಡಿ ಬೇಂಡೆಬೆಂಬಳಿ ಎಚ್ಚರಿಸಿದ್ದಾರೆ.