ಯಾದಗಿರಿ | ಅಧಿವೇಶನದಲ್ಲಿ ಕಲ್ಯಾಣ ಕರ್ನಾಟಕದ ಸಮಸ್ಯೆಗಳ ಕುರಿತು ಚರ್ಚೆಗೆ ಆಗ್ರಹ
ಯಾದಗಿರಿ : ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುವಂತೆ ಸಾಮಾಜಿಕ ಹೋರಾಟಗಾರ್ತಿ ರುದ್ರಾಂಬಿಕ. ಆರ್.ಪಾಟೀಲ್ ಚಟ್ನಳ್ಳಿ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಬೇರೆ ಬೇರೆ ವಿಷಯಗಳ ಕುರಿತು ಕಲಾಪದ ಸಮಯ ಹಾಳು ಮಾಡದೆ ನೈಜ್ಯ ಸಮಸ್ಯೆಗಳ ಕುರಿತು ಚರ್ಚೆಯಾಗಬೇಕು. ಕಲ್ಯಾಣ ಕರ್ನಾಟಕ ಭಾಗವು ಶೈಕ್ಷಣಿಕವಾಗಿ, ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ತೀವ್ರ ಹಿಂದುಳಿದಿದೆ. ಈ ಭಾಗದ ಬಗ್ಗೆ ಎಲ್ಲಾ ಜನಪ್ರತಿನಿಧಿಗಳು ಒಗ್ಗಟ್ಟಿನಿಂದ ಸರಕಾರದ ಗಮನ ಸೆಳೆದು ಚರ್ಚೆ ಮಾಡಿ ಕಾರ್ಯರೂಪಕ್ಕೆ ತರುವಲ್ಲಿ ಮುಂದಾಗಬೇಕು ಎಂದು ಒತ್ತಾಯಿದ್ದರು.
ಪ್ರತಿ ಕಲಾಪದಲ್ಲಿಯೂ ಕಲ್ಯಾಣ ಕರ್ನಾಟಕದ ಭಾಗದ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿಲ್ಲ, ಕಲ್ಯಾಣ ಕರ್ನಾಟಕ ಭಾಗದ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ, ರಸ್ತೆ ಹಾಗೂ ಶಾಲಾ-ಕಾಲೇಜು ಶಿಕ್ಷಕರ ಕೊರತೆ, ಕಟ್ಟಡಗಳ ಸಮಸ್ಯೆ, ಆಸ್ಪತ್ರೆಗಳಲ್ಲಿ ವೈದ್ಯರ ಸಮಸ್ಯೆ ಎದ್ದು ಕಾಣುತ್ತಿವೆ ಇವುಗಳ ಸುಧಾರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.