ಯಾದಗಿರಿ | ಪಿಡಿಓ ಕನ್ನಡ ಪರೀಕ್ಷೆ ಪಾರದರ್ಶಕವಾಗಿ ನಡೆಸಲು ಜಿಲ್ಲಾಧಿಕಾರಿ ಡಾ.ಸುಶೀಲಾ ಸೂಚನೆ

Update: 2024-12-04 11:36 GMT

ಯಾದಗಿರಿ : ಕರ್ನಾಟಕ ಲೋಕಸೇವಾ ಆಯೋಗದಿಂದ ಇದೇ ಡಿ.7 ಹಾಗೂ 8 ರಂದು ನಡೆಯಲಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಗ್ರೂಪ್ ಸಿ ಉಳಿದ ಮೂಲ ವೃಂದದ-150 ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಕನ್ನಡ ಭಾಷಾ ಪರೀಕ್ಷೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯು ಶಿಸ್ತುಬದ್ದ, ಪಾರದರ್ಶಕ ರೀತಿಯಲ್ಲಿ ನಡೆಯುವಂತೆ ನೋಡಿಕೊಳ್ಳಲು ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ "ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಕನ್ನಡ ಭಾಷಾ ಪರೀಕ್ಷೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಭಾವಿ ಸಿದ್ಧತಾ" ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಡಿ.7 ರಂದು ನಡೆಯಲಿರುವ ಪರೀಕ್ಷೆಯಲ್ಲಿ ಯಾದಗಿರಿ ಮತ್ತು ಶಹಾಪುರ ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 9,199 ನೋಂದಣಿಯಾದ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಅದರಂತೆ ಡಿ.8 ರಂದು ಯಾದಗಿರಿ, ಶಹಾಪುರ, ಗುರಮಠಕಲ್ ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 13,128 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ಎರಡು ದಿನ ಜಿಲ್ಲೆಯ 41 ಪರೀಕ್ಷಾ ಕೇಂದ್ರಗಳಲ್ಲಿ ಅವಶ್ಯಕ ಸಿದ್ಧತೆಗಳನ್ನು ಅಚ್ಚುಕಟ್ಟಾಗಿ ಮಾಡಿಕೊಳ್ಳುವಂತೆ ಅವರು ಸೂಚಿಸಿದರು.

ಪರೀಕ್ಷಾ ಕೇಂದ್ರಗಳಿಗೆ ಹಾಜರಾಗುವ ಅಭ್ಯರ್ಥಿಗಳನ್ನು ಕಟ್ಟುನಿಟ್ಟಾಗಿ ತಪಾಸಣೆಗೆ ಒಳಪಡಿಸಬೇಕು. ವಿಶೇಷವಾಗಿ ಅಭ್ಯರ್ಥಿಗಳ ಕಿವಿಯಲ್ಲಿ ಯಾವುದೇ ಇಲೆಕ್ಟ್ರಾನಿಕ್ ಡಿವೈಸ್ ಮತ್ತು ಮೈಕ್ರೋಫೋನ್ ಬಳಸದಿರುವ ಬಗ್ಗೆ ತಪಾಸಣೆ ನಡೆಸಬೇಕು. ಅಭ್ಯರ್ಥಿಗಳನ್ನು ಪ್ರಿಸ್ಕಿಂಗ್ ಮಾಡುವ ಸಂದರ್ಭದಲ್ಲಿ ಮೈಕ್ರೋ ಚಿಪ್ ಅಥವಾ ಇನ್ನಿತರ ಸೂಕ್ಷ್ಮ ಉಪಕರಣಗಳನ್ನು ಅಳವಡಿಸಿಕೊಂಡಿಲ್ಲದ ಬಗ್ಗೆ ತಪಾಸಣೆ ನಡೆಸಿ ಪರೀಕ್ಷಾ ಕೇಂದ್ರಗಳಲ್ಲಿ ಬಿಡುವಂತೆ ಪೋಲಿಸ್ ಸಿಬ್ಬಂದಿಗಳಿಗೆ ಸೂಚಿಸಲು ಅವರು ತಿಳಿಸಿ, ಮೊಬೈಲ್ ಸಹ ಬಳಸುವುದನ್ನು ನಿಷೇಧಿಸಲಾಗಿದೆ ಎಂದರು.

ಪರೀಕ್ಷೆ ಗೌಪ್ಯತೆಯಿಂದಲೂ ,ನಿಯಮ ಬದ್ದವಾದ ನಿರ್ವಹಣೆಯಿಂದ ನಡೆಸಿ, ಪರೀಕ್ಷಾ ದಕ್ಷತೆ ಕಾಪಾಡಲು ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿ, ಪರೀಕ್ಷಾ ಕೇಂದ್ರಗಳ ಸುತ್ತಲೂ ಕಾನೂನಿನ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕೇಂದ್ರಗಳ ಸಮೀಪ ಎಲ್ಲ ಝರಾಕ್ಸ್ ಅಂಗಡಿ ಬಂದ್ ಮಾಡಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಅವರು ತಿಳಿಸಿದರು.

ಅಪರ್ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೋಳ ಮಾತನಾಡಿ, ಈ ಪರೀಕ್ಷೆಗೆ ಪೋಲಿಸ್ ಬಂದೋಬಸ್ತ್ ಜೊತೆಗೆ ಆಯೋಗದಿಂದಲೂ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಪರೀಕ್ಷೆಗೆ ನಿಯೋಜಿಸಿರುವ ಅಧಿಕಾರಿ, ಸಿಬ್ಬಂದಿಗಳು ತಮ್ಮ ಜವಾಬ್ದಾರಿಗಳ ಬಗ್ಗೆ ಆಯೋಗದ ಮಾರ್ಗಸೂಚಿಗಳನ್ನು ತಪ್ಪದೇ ಓದಿಕೊಳ್ಳಲು ಮತ್ತು ತಿಳಿದುಕೊಳ್ಳಲು ಅವರು ಸೂಚಿಸಿದರು.

ಪರೀಕ್ಷೆಗಾಗಿ 41 ಮೇಲ್ವಚಾರಕರು, 41 ನಿರೀಕ್ಷಣಾಧಿಕಾರಿಗಳು, 8 ಮಾರ್ಗಾಧಿಕಾರಿಗಳು ಹಾಗೂ 8 ವೀಕ್ಷಕರನ್ನು ನೇಮಿಸಲಾಗಿದೆ. ಡಿ.7 ರಂದು ಮಧ್ಯಾಹ್ನ 2ರಿಂದ 4 ಗಂಟೆಯವರೆಗೆ ಕನ್ನಡ ಭಾಷಾ ಹಾಗೂ ಡಿ.8 ರಂದು ಬೆಳಿಗ್ಗೆ 10 ರಿಂದ 11-30 ವರೆಗೆ (ಸಾಮಾನ್ಯ ಜ್ಞಾನ ) ವಿಷಯ ಮತ್ತು ಮಧ್ಯಾಹ್ನ 2 ರಿಂದ 4 ರವರೆಗೆ ಸಾಮಾನ್ಯ ಜ್ಞಾನ ವಿಷಯದ ಪರೀಕ್ಷೆ ನಡೆಯಲಿದೆ.

ಸಭೆಯಲ್ಲಿ ಜಿಲ್ಲಾ ಖಜಾನೆ ಅಧಿಕಾರಿ ಮಾಳಿಂಗರಾಯ, ಸಿಪಿಐ ಶ್ರೀದೇವಿ, ನೋಡಲ್ ಅಧಿಕಾರಿ ಬಸವನಗೌಡ ಆಲದಾಳ ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News