ಯಾದಗಿರಿ | ವಿಶೇಷಚೇತನರಿಗೆ ಉತ್ತಮ ಶಿಕ್ಷಣ ನೀಡಿ : ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್

Update: 2024-12-03 13:36 GMT

ಯಾದಗಿರಿ : ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಜಿಲ್ಲಾ ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಸರಕಾರಿ ಪ್ರಥಮ ದರ್ಜೆ ಕಾಲೇಜ್ ನಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು, ವಿಕಲಚೇತನರು ಸಾಮಾನ್ಯ ಮಕ್ಕಳಿಗೂ ಪ್ರೇರಣೆಯಾದ ಉದಾಹರಣೆಗಳಿವೆ. ಅವರು ದೇಹದಿಂದ ಮಾತ್ರ ವಿಕಲಚೇತನರಾಗಿದ್ದರೂ ಶಿಕ್ಷಣ, ಕ್ರೀಡೆ, ಸಂಗೀತ ಮತ್ತು ಪ್ರತಿಯೊಂದರಲ್ಲಿ ಸಾಧನೆ ಮಾಡಬಲ್ಲರು. ವಿಶೇಷ ಚೇತನರಿಗೆ ಪ್ರೋತ್ಸಾಹ ನೀಡಿ, ಗುಣಮಟ್ಟದ ಶಿಕ್ಷಣ ಒದಗಿಸಬೇಕು. ಸಂಬಂಧಿಸಿದ ಅಧಿಕಾರಿಗಳು ಸಹ ಸರಕಾರದ ಸೌಲಭ್ಯಗಳು ತಲುಪಿಸಬೇಕು ಎಂದರು.

ವಿಕಲಚೇತನರಿಗೆ ಜಗತ್ತಿನ ಆಗುಹೋಗುಗಳಿಗೆ ಸ್ಪಂದಿಸುವ ಬೌದ್ಧಿಕ ಸಾಮರ್ಥ್ಯವಿದೆ. ಆದರೆ ಬಹುತೇಕ ಸಂದರ್ಭಗಳಲ್ಲಿ ಅವರನ್ನು ಪ್ರತ್ಯೇಕವಾಗಿ ಪರಿಗಣಿಸುವ ಪರಿಪಾಠವೂ ಕೆಲವೆಡೆ ಕಾಣಿಸುತ್ತಿದೆ. ಅಥವಾ ಕೆಲವೆಡೆ ಅವರಿಗೆ ಇನ್ನಿಲ್ಲದ ಅನುಕಂಪ ತೋರುವುದು ಇದೆ. ಇದು ತಪ್ಪು. ಅಂಗವಿಕಲರಿಗೂ ಸ್ವಾಭಿಮಾನದಿಂದ ಬದುಕುವ ಹಕ್ಕಿದೆ. ರಾಜಕೀಯ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಮಾಹಿತಿ ತಂತ್ರಜ್ಞಾನ, ಮನೊರಂಜನೆ ಮುಂತಾದ ಕ್ಷೇತ್ರದಲ್ಲಿ ಗುರುತಿಸಬಲ್ಲರು. ವಿಶೇಷವಾದ ಸಾಧನೆಯನ್ನು ಮಾಡಬಲ್ಲರು. ಸಮಾಜದಲ್ಲಿ ಅವರ ಮಹತ್ವ ಜನರಿಗೆ ಗೊತ್ತಾಗಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಡಾ. ಸುಶೀಲಾ.ಬಿ ಅವರು ಮಾತನಾಡಿ, ವಿಕಲಚೇತನರು ಒಂದು ವಿಶೇಷವಾದ ಶಕ್ತಿಯನ್ನು ಹೊಂದಿರುತ್ತಾರೆ. ಸಾಮಾನ್ಯ ವ್ಯಕ್ತಿಗಿಂತ ಅವರಲ್ಲಿ ನೆನಪಿನ ಶಕ್ತಿ ಹೆಚ್ಚಾಗಿ ಇರುತ್ತದೆ. ಅವರಿಗೆ ಅದು ದೇವರು ಕೊಟ್ಟ ವರ ಎಂದರು.

2024- 25ನೇ ಸಾಲಿನ ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿಕಲಚೇತನರನ್ನು ಸನ್ಮಾನಿಸಲಾಯಿತು. ಕ್ರೀಡೆಯಲ್ಲಿ ಭಾಗವಹಿಸಿರುವ ಕ್ರೀಡಾಪಟುಗಳಿಗೆ ಪ್ರಥಮ ಹಾಗೂ ದ್ವಿತೀಯ, ತೃತೀಯ ಬಹುಮಾನವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರಣೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವೀರಣ್ಣಗೌಡ, ಜಿಲ್ಲಾ ಅಂಗವಿಕಲರ ಕಲ್ಯಾಣಧಿಕಾರಿಗಳು ಶರಣಬಸಪ್ಪ ಪಾಟೀಲ್, ಸರಕಾರಿ ಪದವಿ ಕಾಲೇಜ್ ಪ್ರಾಂಶುಪಾಲ ಸುಭಾಷ್ ಚಂದ್ರ ಕೌಲಗಿ, ಯುವಜನ ಸೇವಾ ಮತ್ತು ಕ್ರೀಡಾಧಿಕಾರಿ ರಾಜು ಬಾವಿಹಳ್ಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News