ಯಾದಗಿರಿ | ಬ್ಯಾಂಕ್ ಸಾಲ ನೀಡಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ

ಸುರಪುರ : ಜಿಲ್ಲೆಯಲ್ಲಿನ ಬ್ಯಾಂಕುಗಳಲ್ಲಿ ಸಾರ್ವಜನಿಕರಿಗೆ ಸಕಾಲದಲ್ಲಿ ಸಾಲ ನೀಡಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶೋಷಿತರ ಪರ ಹೋರಾಟದ ಸಂಘಟನೆಗಳ ಒಕ್ಕೂಟದಿಂದ ನಗರದ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನದ ಬಳಿ ರಾಜಾ ವೆಂಕಟಪ್ಪ ನಾಯಕ ನಾಮಫಲಕದ ಬಳಿ ಪ್ರತಿಭಟನೆ ನಡೆಸಲಾಯಿತು.
ಒಕ್ಕೂಟದ ರಾಜ್ಯಾಧ್ಯಕ್ಷ ವೆಂಕೋಬ ದೊರೆ ಮಾತನಾಡಿ, ಯಾದಗಿರಿ ಜಿಲ್ಲೆಯ ಬ್ಯಾಂಕ್‌ಗಳ ಪ್ರಾದೇಶಿಕ ವ್ಯವಸ್ಥಾಪಕರು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ, ಬ್ಯಾಂಕುಗಳಲ್ಲಿ ಸಾಲವನ್ನು ನೀಡುತ್ತಿಲ್ಲ, ಬೇರೆ ಬ್ಯಾಂಕುಗಳಲ್ಲಿ ಸಾಲ ತೆಗೆದುಕೊಳ್ಳಲು ಎನ್ ಓ ಸಿ ಕೂಡ ನೀಡುತ್ತಿಲ್ಲ. ಇದರಿಂದಾಗಿ ಗ್ರಾಹಕರು ಬ್ಯಾಂಕುಗಳಿಗೆ ಹಿಡಿ ಶಾಪ ಹಾಕುವಂತಹ ಪರಿಸ್ಥಿತಿ ಎದುರಾಗಿದೆ, ಇದರ ವಿರುದ್ಧ ಪ್ರಾದೇಶಿಕ ವ್ಯವಸ್ಥಾಪಕರು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಂತರ ಜಿಲ್ಲಾಧಿಕಾರಿಗಳಿಗೆ ಬರೆದ ಮನವಿ ತಹಶೀಲ್ದಾರ್ ಕಚೇರಿ ಸಿಬ್ಬಂದಿ ಮೂಲಕ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಒಕ್ಕೂಟದ ತಾಲೂಕಾಧ್ಯಕ್ಷ ನಾಗರಾಜ ದರ್ಬಾರಿ, ವೆಂಕಟೇಶ, ಹಣಮಂತರಾಯ, ಶಿವು, ಅಂಬರೀಶ, ದೇವಪ್ಪ,ನಾಗರಾಜ, ಸಂತೋಷ್ ಸೇರಿದಂತೆ ಅನೇಕರು ಭಾಗವಹಿಸಿದ್ದರು