ಯಾದಗಿರಿ | ಬೇಸಿಗೆ ಹಿನ್ನೆಲೆಯಲ್ಲಿ ಜನ-ಜಾನುವಾರುಗಳಿಗೆ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಮನೋಜ್ ಜೈನ್

ಯಾದಗಿರಿ : ಬೇಸಿಗೆಗಾಲ ಪ್ರಾರಂಭಗೊಂಡಿದ್ದು, ತಾಪಮಾನ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅವಶ್ಯಕ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಶ್ರೀ ಮನೋಜ ಜೈನ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಜನರಿಗೆ ನೀರಿನ ಸಮಸ್ಯೆಯಾಗದಂತೆ ಅವಶ್ಯಕ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಜಲ ಮೂಲಗಳ ಪರೀಕ್ಷಿಸಿದ ನೀರನ್ನು ಪೂರೈಸಲು ಕ್ರಮ ಕೈಗೊಳ್ಳಬೇಕು. ತೀವ್ರ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳ ಬಗ್ಗೆ ನಿಗಾಯಿಟ್ಟು ನೀರು ಪೂರೈಕೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಪ್ರತಿ ಗ್ರಾಮ ಪಂಚಾಯತ್ ವಾರು 15ನೇ ಹಣಕಾಸು ಅನುದಾನ ಲಭ್ಯವಿದ್ದು ,ಸಂಬಂಧಪಟ್ಟ ಅಧಿಕಾರಿಗಳು ಸಕ್ರಿಯರಾಗಿ ಕಾರ್ಯ ನಿರ್ವಹಿಸಬೇಕು. ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳು ಅವಧಿಗೆ ನೀರಿನ ಲಭ್ಯತೆ ಆಧಾರದ ಮೇಲೆ, ಪರಿಶೀಲಿಸಿ ದುರಸ್ತಿಯಲ್ಲಿರುವ ಶುದ್ಧಕುಡಿಯುವ ನೀರನ ಘಟಕಗಳನ್ನು ದುರಿಸ್ತಿಗೊಳಿಸಬೇಕು. ಪ್ರತಿ ಗ್ರಾಮ ಪಂಚಾಯತ್ ವಾರು ಯೋಜನಾ ಬದ್ಧವಾಗಿ, ಯೋಜನೆ ರೂಪಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ನೀರಿಗಾಗಿ ತುರ್ತು ಸಂದರ್ಭದಲ್ಲಿ ಅನುದಾನ ಲಭ್ಯ ಇರುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಜಾನುವಾರು ಹಾಗೂ ಪಕ್ಷಿಗಳ ಅನುಕೂಲಕ್ಕಾಗಿ ಕುಡಿಯುವ ನೀರಿಗಾಗಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಅಡಿ ಈ ಹಿಂದೆ ನೀರಿನ ತೊಟ್ಟಿಗಳನ್ನು ನಿರ್ಮಿಸಲಾಗಿದ್ದು, ಅವುಗಳನ್ನು ಪರಿಶೀಲಿಸಿ ಸಕ್ರಿಯವಾಗಿರುವಂತೆ ನೋಡಿಕೊಳ್ಳಬೇಕು. ಅಭಿಯಾನ ರೂಪದಲ್ಲಿ ಈ ಕಾರ್ಯ ಮಾಡುವಂತೆ ಅವರು ಸೂಚಿಸಿದರು.
ಜಿಲ್ಲೆಯಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ ಹಾಗೂ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದಿಂದ ಕೈಗೊಳ್ಳಬೇಕಾದ ಕಾಮಗಾರಿಗಳ ಬಗ್ಗೆ ಸೂಕ್ತ ಕ್ರಿಯಾಯೋಜನೆ ರೂಪಿಸಿ ಅನುಮೋದನೆ ಪಡೆಯುವಂತೆ ಸೂಚಿಸಿದರು. ಅದರಂತೆ ಕೆಕೆಆರ್‌ಡಿಬಿ ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳ ಕುರಿತು ತುಲನಾತ್ಮಕ (ಕಂಪೇರಿಟಿವ್) ವರದಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಉದ್ಯೋಗ ಖಾತ್ರಿ ಯೋಜನೆ, ಸ್ವಚ್ಛ ಭಾರತ ಮಿಷನ್, ವಿವಿಧ ವಸತಿ ಸೌಲಭ್ಯಗಳು ಕಲ್ಪಿಸಲು ಗುರಿಗೆ ತಕ್ಕಂತೆ ಪ್ರಗತಿ ಸಾಧಿಸಬೇಕು. ಆಹಾರ ಇಲಾಖೆಯಿಂದ ಆಹಾರಧಾನ್ಯ ಕಳ್ಳ ಸಾಗಾಣಿಕೆ ಬಗ್ಗೆ ತೀವ್ರ ನಿಗಾ ಇಡಬೇಕು. ಸೈದಾಪುರ್ ತ್ಯಾಜ್ಯ ನಿರ್ವಹಣಾ ಘಟಕದ ಬಗ್ಗೆ ವರದಿ ಸಲ್ಲಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.