ಯಾದಗಿರಿ | ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆಯನ್ನು ವ್ಯವಸ್ಥಿತವಾಗಿ ಕೈಗೊಳ್ಳಲು ಸೂಚನೆ

Update: 2025-04-28 19:31 IST
ಯಾದಗಿರಿ | ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆಯನ್ನು ವ್ಯವಸ್ಥಿತವಾಗಿ ಕೈಗೊಳ್ಳಲು ಸೂಚನೆ
  • whatsapp icon

ಯಾದಗಿರಿ : ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆಯನ್ನು ಯಾವುದೇ ಲೋಪವಿಲ್ಲದೆ ವ್ಯವಸ್ಥಿತವಾಗಿ ಕೈಗೊಳ್ಳಲು ಸಹಾಯಕ ಆಯುಕ್ತರಾದ ಹಂಪಣ್ಣ ಸಜ್ಜನ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಿಕ್ಷಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ʼಪರಿಶಿಷ್ಟ ಜಾತಿ ಒಳಮೀಸಲಾತಿ ಕುರಿತ ಜಿಲ್ಲಾ ಮಟ್ಟದ ತರಬೇತಿ ಕಾರ್ಯಾಗಾರʼವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಡಾ.ಹೆಚ್.ಎನ್.ನಾಗಮೋಹನ್ ದಾಸ್ ಏಕಸದಸ್ಯ ವಿಚಾರಣಾ ಆಯೋಗದ ವರದಿಯ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿ ಜನಾಂಗದ ಕುಟುಂಬಗಳ ಸಮಗ್ರ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ಕೈಗೊಳ್ಳಲು ಸರ್ಕಾರ ನಿರ್ದೇಶಿಸಿದ್ದು, ವ್ಯವಸ್ಥಿತವಾಗಿ ಯಾವುದೇ ಕುಟುಂಬ ಈ ಸಮೀಕ್ಷೆಯಿಂದ ವಂಚಿತರಾಗದಂತೆ ಎಚ್ಚರಿಕೆಯೊಂದಿಗೆ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಇದೇ ಮೇ 9 ರಿಂದ 17ರವರೆಗೆ ಸಮೀಕ್ಷೆದಾರರು ಮನೆ ಮನೆಗೆ ಭೇಟಿ ನೀಡಿ ವಿವೇಚನಾಯುತ ನಡೆ- ನುಡಿಯೊಂದಿಗೆ ಭೇಟಿಯ ಉದ್ದೇಶವನ್ನು ಮನವರಿಕೆ ಮಾಡಿ ಮೋಬೈಲ್ ಆಪ್ ನಲ್ಲಿಯೇ ಮಾಹಿತಿಯನ್ನು ಬ್ಲಾಕ್ ಆಧಾರದಲ್ಲಿ ಪ್ರತಿ ಬ್ಲಾಕ್ ನಲ್ಲಿ ತಲಾ 300 ಮನೆಗಳ ಕುಟುಂಬಗಳ ಮಾಹಿತಿ ಸಂಗ್ರಹಿಸಬೇಕು. ನಂತರ ಮೇ 19ರಿಂದ 21ರವರೆಗೆ ಸಮೀಕ್ಷೆಯಲ್ಲಿ ಕೈಬಿಟ್ಟು ಹೋದ ಕುಟುಂಬಗಳನ್ನು ಗುರುತಿಸಿ ಮಾಹಿತಿ ಸಂಗ್ರಹಿಸಬೇಕು. ಇದರಲ್ಲಿಯೂ ಬಿಟ್ಟು ಹೋದ ಕುಟುಂಬಗಳಿದ್ದಲ್ಲಿ ಆನ್ ಲೈನ್ ಮೂಲಕ ಸಂಬಂಧಪಟ್ಟ ಜನಾಂಗದವರು ತಾವಾಗಿಯೇ ಸಮೀಕ್ಷೆಯಡಿ ಮಾಹಿತಿ ನೀಡಲು ಅವಕಾಶ ಕಲ್ಪಿಸಲಾಗಿದೆ. ಸಮೀಕ್ಷೆದಾರರು ಮತ್ತು ಸಂಬಂಧಿಸಿದ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವಂತೆ ಅವರು ಸೂಚಿಸಿದರು.

ಸಮೀಕ್ಷೆಯ ಮೇಲ್ವಿಚಾರಣೆ ಗಾಗಿ, ರಾಜ್ಯ ಮಟ್ಟದಲ್ಲಿ ಸಮಿತಿ ಇದ್ದು, ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಇದೆ,ಜಿ.ಪಂ. ಸಿಇಓ ಉಪಾಧ್ಯಕ್ಷರಾಗಿದ್ದಾರೆ.

ಈ ಸಮೀಕ್ಷೆ ಅಂಗವಾಗಿ ಪ್ರಾಥಮಿಕ ಹಾಗೂ ಸಾಮಾಜಿಕವಾಗಿ ಹಾಗೂ ಆರ್ಥಿಕ ಸ್ಥಿತಿಗತಿಗಳ ಸಮೀಕ್ಷೆ ಸಹ ಕೈಗೊಳ್ಳಬೇಕು. ಉಪಜಾತಿಗಳ ಅಂಕಿ ಅಂಶ ಸಹ ಸಂಗ್ರಹಿಸಬೇಕೆಂದ ಅವರು, ಸಮೀಕ್ಷೆ ನಂತರ ಮೇಲ್ವಿಚಾರಕರಿಂದ ಪರಿಶೀಲನೆ ಸಹ ನಡೆಸಲಾಗುತ್ತದೆ ಎಂದು ಹೇಳಿದರು.

ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ವಿಜಯಕುಮಾರ್ ಮಡ್ಡೆ, ತಹಶೀಲ್ದಾರ್ ಸುರೇಶ್ ಅಂಕಲಗಿ, ಪರಿಶಿಷ್ಟ ಜಾತಿ ಕಲ್ಯಾಣಾಧಿಕಾರಿ ಸಿದ್ದಣ್ಣ, ತಾಲೂಕು ಮಟ್ಟದ ಮಾಸ್ಟರ್ ಟ್ರೈನರ್ ಗಳು , ಕ್ಷೇತ್ರ ಶಿಕ್ಷಣಾಧಿಕಾರಿಗಳು ,ಇತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News