ಯಾದಗಿರಿ | ಸರ್ಕಾರಿ ಕಚೇರಿಗಳಿಗೆ ಅನಿರೀಕ್ಷಿತ ಭೇಟಿ ನೀಡಿದ ಶಾಸಕ ಚೆನ್ನಾರೆಡ್ಡಿ ಪಾಟೀಲ್

ಯಾದಗಿರಿ : ನಗರ ಶಾಸಕರಾದ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಅವರು ಇಂದು ಜಿಲ್ಲಾಡಳಿತ ಭವನದ ವಿವಿಧ ಕಚೇರಿಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಅಧಿಕಾರಿ, ಸಿಬ್ಬಂದಿಗಳ ಹಾಜರಾತಿ ಪರಿಶೀಲಿಸಿದರು.
ಇಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಹಾಗೂ ಕಂದಾಯ ಇಲಾಖೆ ವ್ಯಾಪ್ತಿಯ ವಿವಿಧ ಇಲಾಖಾ ಕಚೇರಿಗಳಿಗೆ ಭೇಟಿ ನೀಡಿದರು.
ಉದ್ಯೋಗ ವಿನಿಮಯ ಕಚೇರಿ, ಮಾಹಿತಿ ಕೇಂದ್ರ, ಕಾರ್ಮಿಕ ಇಲಾಖೆ ,ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳ ಕಚೇರಿ, ಸಮಾಜ ಕಲ್ಯಾಣ ಇಲಾಖೆ,ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ, ಸೇರಿದಂತೆ ವಿವಿಧ ಇಲಾಖೆಗಳಿಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಿಬ್ಬಂದಿಗಳಿಂದ, ಅನುಪಸ್ಥಿತರಾಗಿದ್ದ ಅಧಿಕಾರಿಗಳ ದಿನನಿತ್ಯ ಹಾಜರಾತಿ ಬಗ್ಗೆ ಮಾಹಿತಿ ಪಡೆದ ಅವರು, ಸರ್ಕಾರವು ಬೇಸಿಗೆ ಹಿನ್ನೆಲೆಯಲ್ಲಿ ಆರೋಗ್ಯದ ಹಿತದೃಷ್ಟಿಯಿಂದ ಬೆಳಿಗ್ಗೆ 8 ಗಂಟೆಗೆ ಕಲಬುರಗಿ ವಿಭಾಗದಲ್ಲಿ ಸಮಯ ನಿಗದಿಪಡಿಸಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಅಧಿಕಾರಿ ಹಾಗೂ ಸಿಬ್ಬಂದಿಗಳು ನಿಗದಿತ ಸಮಯಕ್ಕೆ ಸರಿಯಾಗಿ ಕಚೇರಿಗೆ ಹಾಜರಾಗಿ ಕರ್ತವ್ಯ ನಿರ್ವಹಿಸುವಂತೆ ಎಚ್ಚರಿಕೆ ನೀಡಿದರು.