ಪಕ್ಷ ಸಂಘಟನೆಗೆ ಹುಬ್ಬಳ್ಳಿಯಲ್ಲಿ ವಾಸ್ತವ್ಯ: ಎಚ್.ಡಿ.ಕುಮಾರಸ್ವಾಮಿ
ಬೆಳಗಾವಿ, ನ. 17: ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ದೃಷ್ಟಿಯಿಂದ ನಾಳೆಯಿಂದಲೇ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಹೂಡಲಿದ್ದೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದ್ದಾರೆ.
ಗುರುವಾರ ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಗಳ ಜತೆ ಮಾತನಾಡಿದ ಅವರು, 2018ರ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ಅಥವಾ ವಿಜಯಪುರ ಜಿಲ್ಲೆಯಿಂದ ಸ್ಪರ್ಸಬೇಕೆಂದು ಕಾರ್ಯಕರ್ತರು ಒತ್ತಡ ಹೇರುತ್ತಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಕನಿಷ್ಠ 35ರಿಂದ 40 ಕ್ಷೇತ್ರಗಳನ್ನು ಗೆಲ್ಲಬೇಕೆಂಬ ಗುರಿ ಹಾಕಿಕೊಳ್ಳಲಾಗಿದೆ. ಆ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲು ನಾಳೆಯಿಂದಲೇ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಹೂಡಲಿದ್ದು, ನಾಳೆ ಪತ್ನಿ ಮತ್ತು ಕುಟುಂಬದ ಸದಸ್ಯರೊಂದಿಗೆ ಹುಬ್ಬಳ್ಳಿಯಲ್ಲಿ ನಿವಾಸದ ಗೃಹ ಪ್ರವೇಶ ಮಾಡಲಾಗುವುದು ಎಂದು ಸ್ಪಷ್ಟಣೆ ನೀಡಿದರು.
ಸಂಪರ್ಕದಲ್ಲಿ: ಕಾಂಗ್ರೆಸ್ ಹಾಗೂ ಬಿಜೆಪಿಯಿಂದ ಬೇಸರಗೊಂಡಿರುವ ಹಲವು ಮಂದಿ ತನ್ನ ಸಂಪರ್ಕದಲ್ಲಿದ್ದು, ಮುಂದಿನ ಆರು ತಿಂಗಳಲ್ಲಿ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಬದಲಾವಣೆಗಳಾಗಲಿವೆ ಎಂದು ಭವಿಷ್ಯ ನುಡಿದ ಅವರು, ಮಾಜಿ ಸಚಿವರಾದ ಸತೀಶ್ ಜಾರಕಿಹೊಳಿ ಮತ್ತು ಉಮೇಶ್ ಕತ್ತಿ ಅವರೊಂದಿಗೆ ತಾನಿನ್ನೂ ಯಾವುದೇ ಚರ್ಚೆ ನಡೆಸಿಲ್ಲ ಎಂದರು.
ಉತ್ತರದ ಸಮಸ್ಯೆಗಳ ಚರ್ಚೆ: ನ.21ರಿಂದ ಆರಂಭವಾಗಲಿರುವ ವಿಧಾನ ಮಂಡಲ ಅವೇಶನದಲ್ಲಿ ರಾಜ್ಯದಲ್ಲಿ ಬರ ಮತ್ತು ಮಹಾದಾಯಿ ವಿವಾದ ಸೇರಿದಂತೆ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗೆ ಪಕ್ಷ ವಿಶೇಷ ಆದ್ಯತೆ ನೀಡಲಿದೆ ಎಂದು ಅವರು ತಿಳಿಸಿದರು.