ದೇವೇಗೌಡರ ವಿರುದ್ಧ ಅವಹೇಳನಕಾರಿ ಟ್ವೀಟ್ ಆರೋಪ: ಒಮರ್ ಅಬ್ದುಲ್ಲಾ ಕ್ಷಮೆಯಾಚನೆಗೆ ಜೆಡಿಎಸ್ ಪಟ್ಟು
ಬೆಂಗಳೂರು, ಎ.18: ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ವಿರುದ್ಧ ಅವಹೇಳನಕಾರಿ ಟ್ವೀಟ್ ಮಾಡಿರುವುದನ್ನು ಖಂಡಿಸಿ, ಈ ಕೂಡಲೇ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ಧರಣಿ ನಡೆಸಿದರು.
ಮಂಗಳವಾರ ನಗರದ ಮೌರ್ಯ ವೃತ್ತದ ಬಳಿಯಿರುವ ಗಾಂಧಿ ಪ್ರತಿಮೆ ಎದುರು ಜೆಡಿಎಸ್ ಬೆಂಗಳೂರು ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಧರಣಿಯನ್ನುದ್ದೇಶಿಸಿ ಮಾತನಾಡಿದ ರಾಜ್ಯಸಭಾ ಸದಸ್ಯ ಕುಪೇಂದ್ರರೆಡ್ಡಿ, ದೇವೇಗೌಡರು ಪ್ರಧಾನಿಯಾಗಿದ್ದಾಗ ಅವರು ಮಾಡಿದ ಅಭಿವೃದ್ಧಿ ಕೆಲಸಗಳ ಬಗ್ಗೆ ನಿಮ್ಮ ತಂದೆಯನ್ನು ಕೇಳಿ ತಿಳಿದುಕೊಳ್ಳಿ ಎಂದು ಒಮರ್ ಅಬುಲ್ಲಾ ವಿರುದ್ಧ ಕಿಡಿಕಾರಿದರು.
ಭಾರತೀಯ ನೌಕಾದಳದ ಮಾಜಿ ಅಧಿಕಾರಿ ಕುಲಭೂಷಣ್ ಜಾದವ್ ಬಗ್ಗೆ ಪಾಕಿಸ್ತಾನ ಮಾಜಿ ಅಧ್ಯಕ್ಷ ಫರ್ವೇಝ್ ಮುಷರಫ್ ಮಾತನಾಡುವುದು ಒಂದೇ, ಅಭಿವೃದ್ಧಿ ಬಗ್ಗೆ ಎಚ್.ಡಿ.ದೇವೇಗೌಡರನ್ನು ಕೇಳುವುದು ಒಂದೇ ಎಂದು ಅವಹೇಳನಕಾರಿ ಟ್ವೀಟ್ ಮಾಡಿರುವುದು ಸರಿಯಲ್ಲ ಎಂದು ಹೇಳಿದರು.
ಶಾಸಕ ಗೋಪಾಲಯ್ಯ ಮಾತನಾಡಿ, ದೇವೇಗೌಡರು ಪ್ರಧಾನಿಯಾಗಿದ್ದಾಗ ಜನಪರ ಕೆಲಸಗಳನ್ನು ಮಾಡಿದ್ದಾರೆ. ಇಂತಹ ಮುತ್ಸದ್ದಿ ರಾಜಕಾರಣಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದು ಖಂಡನೀಯ ಎಂದರು.
ಧರಣಿಯಲ್ಲಿ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಮಾಜಿ ಉಪಮೇಯರ್ ಹೇಮಲತಾ ಗೋಪಾಲಯ್ಯ, ಬೆಂಗಳೂರು ನಗರ ಘಟಕ ಅಧ್ಯಕ್ಷ ಆರ್.ಪ್ರಕಾಶ್ ಮತ್ತಿತರು ಭಾಗವಹಿಸಿದ್ದರು.