ಝಮೀರ್ ಅಹ್ಮದ್ ವಿರುದ್ಧ ಜಿ.ಎ.ಬಾವ ಕಿಡಿ
ಝಮೀರ್ ಅಹ್ಮದ್ ಖಾನ್
ಬೆಂಗಳೂರು, ಮೇ 8: ಮುಂದಿನ ಚುನಾವಣೆಯಲ್ಲಿ ಚಾಮರಾಜಪೇಟೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವುದಾಗಿ ಶಾಸಕ ಬಿ.ಝೆಡ್. ಝಮೀರ್ ಅಹ್ಮದ್ ಖಾನ್ ನೀಡಿದ್ದ ಹೇಳಿಕೆಗೆ ಕಾಂಗ್ರೆಸ್ ಮುಖಂಡ ಜಿ.ಎ. ಬಾವ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸೋಮವಾರ ನಗರದ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷದ ಪದಾಧಿಕಾರಿಗಳ ಸಮಾಲೋಚನಾ ಸಭೆಯಲ್ಲಿ ಮಾತನಾಡಿರುವ ಅವರು, ಜೆಡಿಎಸ್ ಬಂಡಾಯ ಶಾಸಕ ಝಮೀರ್ ಅಹ್ಮದ್ ಖಾನ್ ಇನ್ನೂ ಕಾಂಗ್ರೆಸ್ ಪಕ್ಷದ ಸದಸ್ಯತ್ವವನ್ನೇ ಪಡೆದುಕೊಂಡಿಲ್ಲ. ಆದರೂ, ತಾನು ಕಾಂಗ್ರೆಸ್ ಅಭ್ಯರ್ಥಿಯಾಗುತ್ತಿದ್ದೇನೆ ಎಂದು ಹೇಳಿಕೊಳ್ಳಲು ಅವರಿಗೆ ಅಧಿಕಾರ ಕೊಟ್ಟವರು ಯಾರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
"2013ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಚಾಮರಾಜಪೇಟೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಾನು 50 ಸಾವಿರಕ್ಕೂ ಅಧಿಕ ಮತಗಳನ್ನು ಪಡೆದಿದ್ದೆ. ಪಕ್ಷದ ಕಾರ್ಯಕರ್ತರು ಹಾಗೂ ನಾಯಕರ ಸೂಚನೆಯಂತೆ ನಾನು ಚುನಾವಣೆಯಲ್ಲಿ ಸ್ಪರ್ಧಿಸಿದ್ದೆ. ಮುಂದಿನ ಚುನಾವಣೆಯಲ್ಲೂ ನನಗೆ ಅವಕಾಶ ಸಿಗಬಹುದು ಎಂಬ ವಿಶ್ವಾಸವಿದೆ" ಎಂದು ಬಾವಾ ಹೇಳಿದರು.