ಪರಿಸರ ಸೂಕ್ಷ್ಮ ವಲಯ ವ್ಯಾಪ್ತಿ ಇಳಿಕೆಗೆ ಪ್ರಾದೇಶಿಕ ಆಯುಕ್ತರ ಸಭೆ: ಸಚಿವ ರಮಾನಾಥ್ ರೈ
ತಲಕಾವೇರಿ ವನ್ಯಧಾಮ
ಬೆಂಗಳೂರು, ಜೂ. 12: ‘ತಲಕಾವೇರಿ ವನ್ಯಧಾಮ’ ವ್ಯಾಪ್ತಿಯಲ್ಲಿ ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಿರುವ ಅಧಿಸೂಚನೆ ಸಂಬಂಧ ಶೀಘ್ರದಲ್ಲೆ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ರಮಾನಾಥ್ ರೈ ಭರವಸೆ ನೀಡಿದ್ದಾರೆ.
ಸೋಮವಾರ ವಿಧಾನಸಭೆ ಶೂನ್ಯವೇಳೆಯಲ್ಲಿ ಬಿಜೆಪಿ ಹಿರಿಯ ಸದಸ್ಯ ಕೆ.ಜಿ. ಬೋಪಯ್ಯ ಪ್ರಸ್ತಾಪಿಸಿದ ವಿಷಯಕ್ಕೆ ಪ್ರತಿಕ್ರಿಯಿಸಿದ ರಮಾನಾಥ್ ರೈ, ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ಸುಮಾರು 10 ಕಿ.ಮೀ ವ್ಯಾಪ್ತಿಯಲ್ಲಿ ಪರಿಸರ ಸೂಕ್ಷ್ಮ ವಲಯ ಎಂದು ಘೋಷಿಸಲಾಗುತ್ತಿದೆ.
ಆದರೆ, ರಾಜ್ಯ ಸರಕಾರ ಆ ವ್ಯಾಪ್ತಿಯಲ್ಲಿ ಇದೀಗ 1 ಕಿ.ಮೀ.ಗೆ ಇಳಿಸಲಾಗಿದೆ. ನಗರ ವ್ಯಾಪ್ತಿಯಲ್ಲಿದ್ದರೆ ಅದನ್ನು ಕಡಿಮೆ ಮಾಡಲು ಅವಕಾಶವಿದೆ. ಅರಣ್ಯ ಪ್ರದೇಶ ಮತ್ತು ಗಡಿ ಪ್ರದೇಶದಲ್ಲಿ ಬೇರೆ-ಬೇರೆ ಮಾನದಂಡ ನಿಗದಿಪಡಿಸಲಾಗಿದೆ ಎಂದು ವಿವರ ನೀಡಿದರು.
ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿದ ಬಳಿಕ ತಲಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿನ ಪರಿಸರ ಸೂಕ್ಷ್ಮ ವಲಯ ಎಂದು ಹೊರಡಿಸಿರುವ ಅಧಿಸೂಚನೆ ಬಗ್ಗೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ವನ್ಯಧಾಮ ವಲಯದ ವ್ಯಾಪ್ತಿ ಕಡಿಮೆ ಮಾಡುವಂತೆ ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದರು.