ಶಿವಮೊಗ್ಗ: ಗಣೇಶ ಹಬ್ಬಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್
ಶಿವಮೊಗ್ಗ, ಆ.22: ಜಿಲ್ಲೆಯಲ್ಲಿ ಸುಗಮ ಶಾಂತಿಯುತವಾಗಿ ಗಣೇಶ ಚತುರ್ಥಿ ಹಬ್ಬ ಆಚರಣೆ ಮಾಡುವುದಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ಇಲಾಖೆಯು ವ್ಯಾಪಕ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಸೂಕ್ಷ್ಮ ಸ್ಥಳಗಳಲ್ಲಿ ಕಟ್ಟೆಚ್ಚರವಹಿಸಿದೆ. ಹಗಲು-ರಾತ್ರಿ ಗಸ್ತು ವ್ಯವಸ್ಥೆ ಬಿಗಿಗೊಳಿಸಿದೆ. ಸಮಾಜಘಾತುಕ ವ್ಯಕ್ತಿ-ಸಂಘಟನೆಗಳ ಮೇಲೆ ಹದ್ದಿನ ಕಣ್ಣಿಟ್ಟಿದೆ.
ಸಮಾಜದ ಶಾಂತಿ-ಸುವ್ಯವಸ್ಥೆಗೆ ಭಂಗ ಉಂಟು ಮಾಡುವ ಸಮಾಜಘಾತುಕ ವ್ಯಕ್ತಿ ಹಾಗೂ ಸಂಘಟನೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರಗಿಸುವುದಾಗಿ ಪೊಲೀಸ್ ಇಲಾಖೆ ಈಗಾಗಲೇ ಎಚ್ಚರಿಕೆಯ ಸಂದೇಶ ರವಾನಿಸಿದೆ. ಜೊತೆಗೆ ಆಯಾ ಠಾಣಾ ವ್ಯಾಪ್ತಿಯಲ್ಲಿ ರೌಡಿ ಹಾಗೂ ಮತೀಯ ಗೂಂಡಾಗಳ ಪರೇಡ್ ನಡೆಸಲಾಗುತ್ತಿದೆ.
ಪೊಲೀಸ್ ಇಲಾಖೆಯ ಮೂಲಗಳು ನೀಡುವ ಮಾಹಿತಿ ಪ್ರಕಾರ ಜಿಲ್ಲೆಯ ಏಳು ತಾಲೂಕು ವ್ಯಾಪ್ತಿಯಲ್ಲಿ ಒಟ್ಟಾರೆ 2,710 ರೌಡಿ ಪಟ್ಟಿಯಲ್ಲಿದ್ದಾರೆ. ಉಳಿದಂತೆ 510 ಮತೀಯ ಗೂಂಡಾ ಪಟ್ಟಿಯಲ್ಲಿದ್ದಾರೆ. ಶಿವಮೊಗ್ಗ ನಗರದಲ್ಲಿಯೇ ಅತ್ಯಧಿಕ ಪ್ರಮಾಣದಲ್ಲಿ ರೌಡಿ ಹಾಗೂ ಮತೀಯ ಗೂಂಡಾಗಳಿದ್ದಾರೆ ಎಂದು ಮಾಹಿತಿ ನೀಡುತ್ತವೆ.
ಈಗಾಗಲೇ ಸಾವಿರಾರು ರೌಡಿಗಳನ್ನು ತಾಲೂಕು ದಂಡಾಧಿಕಾರಿಗಳ ಸಮ್ಮುಖದಲ್ಲಿ ಹಾಜರುಪಡಿಸಿ, ಎಚ್ಚರಿಕೆ ನೀಡಿ್ದಾರೆ. ಗಣೇಶ ಚತುರ್ಥಿ ಹಬ್ಬದ ವೇಳೆ ಕಾನೂನು-ಸುವ್ಯವಸ್ಥೆಗೆ ಂಗ ಉಂಟು ಮಾಡಿದರೆ ನಿರ್ದಾಕ್ಷಿಣ್ಯ ಕ್ರಮ ಜರಗಿಸುವ ಎಚ್ಚರಿಕೆ ಕೊಡು ತ್ತಿದ್ದಾರೆ ಎಂದು ಇಲಾಖೆಯ ಮೂಲಗಳು ಹೇಳುತ್ತವೆ.
ಗಸ್ತು ವ್ಯವಸ್ಥೆ ಬಿಗಿ: ಗಣೇಶ ಹಬ್ಬ ಪೂರ್ಣಗೊಳ್ಳು ವವರೆಗೂ ಜಿಲ್ಲೆಯಾದ್ಯಂತ ಹಗಲು-ರಾತ್ರಿ ಗಸ್ತು ವ್ಯವಸ್ಥೆಯನ್ನು ಪೊಲೀಸ್ ಇಲಾಖೆ ಬಿಗಿಗೊಳಿಸಿದೆ. ಅದರಲ್ಲಿಯೂ ರಾತ್ರಿ ಗಸ್ತು ವ್ಯವಸ್ಥೆ ಹೆಚ್ಚಿಸಲಾಗಿದೆ. ಈ ಮೂಲಕ ಕಿಡಿಗೇಡಿಗಳ ಕುಕೃತ್ಯಗಳಿಗೆ ಆಸ್ಪದವಾಗದಂತೆ ಎಚ್ಚರವಹಿಸಲಾಗಿದೆ.
ಶಾಂತಿ-ಸುವ್ಯವಸ್ಥೆಗೆ ಧಕ್ಕೆ ತಂದರೆ ಕಠಿಣ ಕ್ರಮ: ಎಎಸ್ಪಿ
ಶಾಂತಿಯುತವಾಗಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾ ಪೊಲೀಸ್ ಇಲಾಖೆ ಎಲ್ಲ ರೀತಿಯ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಶಾಂತಿ-ಸುವ್ಯವಸ್ಥೆಗೆ ಧಕ್ಕೆ ತರುವವರು ಯಾರೇ ಆಗಿರಲಿ, ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರಗಿಸಲಾಗುವುದು. ಸಾರ್ವಜನಿಕರು ಕೂಡ ಪೊಲೀಸ್ ಇಲಾಖೆಗೆ ಸೂಕ್ತ ಸಹಕಾರ ನೀಡಬೇಕು. ತಮ್ಮ ಪ್ರದೇಶ ವ್ಯಾಪ್ತಿಯಲ್ಲಿ ಕುಕೃತ್ಯ ನಡೆಸುವವರ ಬಗ್ಗೆ ಮಾಹಿತಿ ನೀಡಬೇಕು’ ಎಂದು ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಎಂ. ಮುತ್ತುರಾಜ್ರವರು ಮನವಿ ಮಾಡಿದ್ದಾರೆ.