ಮಡಿಕೇರಿ: ಜಿ.ಪಂ ಸಿಇಒ ವಿರುದ್ಧ ದಲಿತ ಸಂಘಟನೆಗಳ ಒಕ್ಕೂಟ ಅಸಮಾಧಾನ: ಅಮಾನತಿಗೆ ಆಗ್ರಹ
ಮಡಿಕೇರಿ,ಜ.30 : ಸೋಮವಾರಪೇಟೆ ತಾಲ್ಲೂಕು ಪಂಚಾಯತ್ ಸಿಬ್ಬಂದಿ ಮೇಲೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ದಲಿತ ಸಂಘಟನೆಗಳ ಒಕ್ಕೂಟ ನಗರದ ಜಿ.ಪಂ ಕಛೇರಿ ಎದುರು ಪ್ರತಿಭಟನೆ ನಡೆಸಿತು.
ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್, ದಲಿತ ಮುಖಂಡ ಹಾಗೂ ಜಿ.ಪಂ ಮಾಜಿ ಅಧ್ಯಕ್ಷ ಬಿ.ಶಿವಪ್ಪ, ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಹೆಚ್.ಸಿ.ಸತೀಶ್ ನೇತೃತ್ವದಲ್ಲಿ ಸಂಘಟನೆಯ ಕಾರ್ಯಕರ್ತರು ಜಿ.ಪಂ ಸಾಮಾನ್ಯ ಸಭೆಯ ಸಂದರ್ಭ ಪ್ರತಿಭಟನೆ ನಡೆಸಿ ಗಮನ ಸೆಳೆದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಜನವರಿ 20 ರಂದು ಸೋಮವಾರಪೇಟೆ ತಾಲ್ಲೂಕು ಪಂಚಾಯತ್ ಕಛೇರಿಗೆ ಭೇಡಿ ನೀಡಿದ್ದ ಸಿಇಒ, ಸಿಬ್ಬಂದಿ ಕೆ.ಸಿ.ರಂಜಿತ್ ಎಂಬವರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ದೌರ್ಜನ್ಯ ಪ್ರಕರಣದಡಿ ಮೊಕದ್ದಮೆ ದಾಖಲಾಗಿದ್ದರೂ ಸಿಇಒ ರನ್ನು ಬಂಧಿಸಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ಸಂದರ್ಭ ಜಿ.ಪಂ ಅಧ್ಯಕ್ಷ ಬಿ.ಎ.ಹರೀಶ್, ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರುಗಳು ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದರು. ಜನಪ್ರತಿನಿಧಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಪ್ರತಿಭಟನಾಕಾರರು ಸಿಇಒ ರನ್ನು ಬಂಧಿಸಿ, ಅಮಾನತುಗೊಳಿಸುವಂತೆ ಆಗ್ರಹಿಸಿದರು.
ಸಿಇಒ ಅವರ ಉಪಸ್ಥಿತಿಯಲ್ಲಿ ಸಭೆ ನಡೆಸಬಾರದೆಂದು ಒತ್ತಾಯಿಸಿದರು. ಅಧ್ಯಕ್ಷ ಹರೀಶ್ ಪ್ರತಿಭಟನಾಕಾರರನ್ನು ಸಮಾಧಾನಿಸುವ ಪ್ರಯತ್ನ ಮಾಡಿದರಾದರೂ, ಅಧಿಕಾರಿ ವಿರುದ್ಧ ಕ್ರಮಕ್ಕೆ ಪ್ರತಿಭಟನಾಕಾರರು ತೀವ್ರ ಒತ್ತಡ ಹೇರಿದರು.
ಈ ಸಂದರ್ಭ ಮಾತನಾಡಿದ ಅಧ್ಯಕ್ಷ ಹರೀಶ್, ವಿಷಯದ ಕುರಿತು ಅಗತ್ಯ ಕ್ರಮಕ್ಕೆ ಸರಕಾರಕ್ಕೆ ಶಿಫಾರಸು ಮಾಡುವುದಾಗಿ ಭರವಸೆ ನೀಡಿದರು