ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಸಾಧಕ ಕ್ರೀಡಾಪಟುಗಳಿಗೆ ಸನ್ಮಾನ
ಉಡುಪಿ, ಆ.29: ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಬುಧವಾರ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
ಕ್ರೀಡಾಕೂಟವನ್ನು ಉದ್ಘಾಟಿಸಿದ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಮಾತನಾಡಿ, ಕ್ರೀಡೆಯಲ್ಲಿ ಸಾಧನೆ ಮಾಡಬೇಕಾದರೆ ಪೋಷಕರ ಪ್ರೋತ್ಸಾಹ ಅಗತ್ಯ. ಇತರ ಜಿಲ್ಲೆಗಳಿಗೆ ಹೋಲಿಸಿದರೆ ಉಡುಪಿ ಜಿಲ್ಲೆಯಲ್ಲಿ ಕ್ರೀಡೆಗೆ ಸಂಬಂಧಿಸಿ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಸುಸಜ್ಜಿತ ಕ್ರೀಡಾಂಗಣ, ಜಿಮ್, ಸ್ವಿಮ್ಮಿಂಗ್ಪೂಲ್ ಸೇರಿದಂತೆ ಕ್ರೀಡೆಗೆ ಸಂಬಂಧಿಸಿದ ಎಲ್ಲ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ ಜಿಲ್ಲೆಯ ಕ್ರೀಡಾಪಟುಗಳಾದ ಪ್ರಜ್ಞಾ ಕೆ., ಸೌಂದರ್ಯಾ, ಅಭಿನ್ ದೇವಾಡಿಗ, ರೋಹನ್ ಆರ್. ಕೋಟ್ಯಾನ್, ಮಹಿಮಾ ಶೇರಿಗಾರ್, ಆಯುಷ್ ಶೆಟ್ಟಿ, ಮುಹಮ್ಮದ್ ಶಾದ್, ಗೌತಮಿ, ಮೇಘನಾ, ರಕ್ಷಿತಾ, ವೈಷ್ಣವಿ ಸುವರ್ಣ, ಶ್ರಾವ್ಯಾ, ಪೃಥ್ವಿ, ಶರಣ್ಯ, ವಿಜಯಲಕ್ಷ್ಮೀ, ಸಾತ್ಲಿಂಗ್ ಭೀಮಪ್ಪ, ಸುಜಿತ್ ಪೂಜಾರಿ, ದರ್ಶನ್, ರೋಶನ್, ಪ್ರಸಾದ್, ಕೀರ್ತನ್, ಗುರುರಾಜ್ ಅವರನ್ನು ಸನ್ಮಾನಿಸಲಾಯಿತು.
ಮುಖ್ಯ ಅತಿಥಿಯಾಗಿ ಉಡುಪಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಕಾಪಶಿ ಮಾತನಾಡಿದರು.
ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ ವಹಿಸಿದ್ದರು.
ಉಡುಪಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.
ಉಪನ್ಯಾಸಕರಾದ ಪ್ರಕಾಶ್ ಕ್ರಮಧಾರಿ ವಂದಿಸಿದರು. ಪ್ರೊ.ನಿತ್ಯಾನಂದ ಕಾರ್ಯಕ್ರಮ ನಿರೂಪಿಸಿದರು.