ಮಂಗಳೂರು: ಸರಕಾರಿ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಗೈರು
ತರಾಟೆಗೆ ತೆಗೆದುಕೊಂಡ ಸಚಿವ ಖಾದರ್
ಮಂಗಳೂರು, ಸೆ.2: ರಾಜ್ಯ ಸರಕಾರದಿಂದ ಹಮ್ಮಿಕೊಳ್ಳುವ ಸಮಾರಂಭದಲ್ಲಿ ದ.ಕ. ಜಿಲ್ಲೆಯ ಜಿಲ್ಲಾಧಿಕಾರಿ ಗೈರು ಹಾಜರಾಗಿರುವುದು ಖಂಡನೀಯ. ಓರ್ವ ಜಿಲ್ಲಾಧಿಕಾರಿ ಸರಕಾರದಿಂದಲೇ ಏರ್ಪಡಿಸುವ ಕಾರ್ಯಕ್ರಮದಲ್ಲಿ ಭಾಗಿಯಾಗುವುದಿಲ್ಲ ಎನ್ನುವುದಾದರೆ, ಮತ್ತಿನ್ನಾವ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ ಎಂದು ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ. ಖಾದರ್ ಜಿಲ್ಲಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ದ.ಕ. ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ನಗರದ ಪುರಭವನದ ಮಿನಿ ಸಭಾಭವನದಲ್ಲಿ ರವಿವಾರ ಹಮ್ಮಿಕೊಳ್ಳಲಾಗಿದ್ದ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರಕಾರಿ ಕಾರ್ಯಕ್ರಮಗಳಲ್ಲಿ ಅಧಿಕಾರಿಗಳು ಪಾಲ್ಗೊಳ್ಳಬೇಕು. ಕೇವಲ ಶಾಸಕ, ಸಚಿವರಿಗೆ ಕಾರ್ಯಕ್ರಮ ಮೀಸಲು ಎಂದರೆ ಹೇಗೆ ಎಂದು ಸಚಿವರು ಪ್ರಶ್ನಿಸಿದರು.
ಈ ಬಗ್ಗೆ ಸರಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಪತ್ರ ಬರೆಯುವುದಾಗಿ ತಿಳಿಸಿದ ಅವರು, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.