ಮಂಗಳೂರು: ಮಾದಕ ವಸ್ತು ಹೊಂದಿದ್ದ ಓರ್ವನ ಸೆರೆ; 3.20 ಲಕ್ಷ ರೂ. ಮೌಲ್ಯದ ಸೊತ್ತು ವಶ
ಮಂಗಳೂರು, ಸೆ. 27: ನಗರದಲ್ಲಿ ಸಾರ್ವಜನಿಕವಾಗಿ ಮಾದಕ ವಸ್ತು ಎಂಡಿಎಂಎ (Methylene dioxy methamphetamine) ನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕಾಟಿಪಳ್ಳ 2ನೇ ಬ್ಲಾಕ್ ನಿವಾಸಿ ಮುಹಮ್ಮದ್ ಶಾಫಿ (32) ಬಂಧಿತ ಆರೋಪಿ.
ಬಂಧಿತನಿಂದ ಸುಮಾರು 3.15 ಲಕ್ಷ ರೂ. ಮೌಲ್ಯದ 90 ಗ್ರಾಂ ತೂಕದ ನಿಷೇಧಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್, ಡಿಜಿಟಲ್ ತೂಕದ ಯಂತ್ರ ಹಾಗೂ ನಗದನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 3,20,500 ರೂ. ಎಂದು ಅಂದಾಜಿಸಲಾಗಿದೆ.
ನಿಷೇಧಿತ ಮಾದಕ ವಸ್ತು ಎಂಡಿಎಂಎ ನ್ನು ಮುಂಬೈಯಿಂದ ಅಕ್ರಮವಾಗಿ ಖರೀದಿಸಿ ಮಂಗಳೂರಿನಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿ ರುವ ಬಗ್ಗೆ ದೊರೆತ ಮಾಹಿತಿಯಂತೆ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದರು.
ಆರೋಪಿ ಮುಂಬೈಯಿಂದ ಈ ಮಾದಕ ವಸ್ತುವನ್ನು ತಂದು ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದನು ಎನ್ನಲಾಗಿದೆ. ಆರೋಪಿಯು ಮಂಗಳೂರು ನಗರದಲ್ಲಿ ಹಲವು ವ್ಯಕ್ತಿಗಳಿಗೆ ಈ ಮಾದಕ ವಸ್ತುವನ್ನು ಮಾರಾಟ ಮಾಡಿರುವ ಬಗ್ಗೆ ತಿಳಿದುಬಂದಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ. ಆರೋಪಿಯನ್ನು ಹಾಗೂ ವಶಪಡಿಸಿಕೊಂಡ ಸೊತ್ತುಗಳನ್ನು ಮುಂದಿನ ಕ್ರಮಕ್ಕಾಗಿ ಕಂಕನಾಡಿ ನಗರ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ನಗರ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ನಿರ್ದೇಶನದಂತೆ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಉಮಾ ಪ್ರಶಾಂತ್ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಇನ್ಸ್ಪೆಕ್ಟರ್ ಶಾಂತಾರಾಮ, ಪಿಎಸ್ಸೈ ಶ್ಯಾಮ್ಸುಂದರ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.