ಉಡುಪಿ: ವಿಶ್ವ ಹಿರಿಯ ನಾಗರಿಕರ ದಿನಾಚರಣೆ
ಉಡುಪಿ, ಸೆ.28: ಜಿಲ್ಲಾಡಳಿತ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ, ಆರೋಗ್ಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲೆ, ವಕೀಲರ ಸಂಘ ಉಡುಪಿ, ಹಿರಿಯ ನಾಗರಿಕರ ಸಂಸ್ಥೆಗಳು ಉಡುಪಿ ಜಿಲ್ಲೆ, ಉಡುಪಿ ಜಿಲ್ಲಾ ಮಹಿಳಾ ಮಂಡಳಿಗಳ ಒಕ್ಕೂಟ ಹಾಗೂ ವೃದ್ದಾಶ್ರಮಗಳು ಉಡುಪಿ ಜಿಲ್ಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅ.1ರಂದು ಬೆಳಗ್ಗೆ 10:30ಕ್ಕೆ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಮತ್ತು ಕನ್ನಡ- ಸಂಸ್ಕೃತಿ ಇಲಾಖೆ ಸಚಿವೆ ಡಾ.ಜಯಮಾಲಾ ಉದ್ಘಾಟಿಸಲಿದ್ದು, ಉಡುಪಿ ಶಾಸಕ ರಘುಪತಿ ಭಟ್ ಅದ್ಯಕ್ಷತೆ ವಹಿಸಲಿದ್ದಾರೆ.
ದಿನಾಚರಣೆಯ ಅಂಗವಾಗಿ ಬೆಳಗ್ಗೆ 8:30ರಿಂದ 10:30ರವರೆಗೆ ಆರೋಗ್ಯ ಇಲಾಖೆ ವತಿಯಿಂದ ಹಿರಿಯ ನಾಗರಿಕರಿಗೆ ನೇತ್ರ ಹಾಗೂ ಆರೋಗ್ಯ ತಪಾಸಣೆಯನ್ನು ಉಚಿತವಾಗಿ ನಡೆಸಲಾಗುವುದು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.