ಉಡುಪಿ ನಗರಸಭೆ: ಪ್ಲಾಸ್ಟಿಕ್ ನಿಷೇಧಕ್ಕೆ ಕಾರ್ಯಪಡೆ
ಉಡುಪಿ, ಸೆ.29: ಕರ್ನಾಟಕ ಸರಕಾರದ ಆದೇಶದಂತೆ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಪ್ಲಾಸ್ಟಿಕ್ ಭಿತ್ತಿಪತ್ರ, ಪ್ಲಾಸ್ಟಿಕ್ ತೋರಣ, ಪ್ಲೆಕ್ಸ್, ಪ್ಲಾಸ್ಟಿಕ್ ಬಾವುಟ, ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ, ಕ್ಲಿಂಗ್ ಫಿಲ್ ಮತ್ತು ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆ ಹಾಗೂ ಥರ್ಮಕೋಲ್ ಮತ್ತು ಪ್ಲಾಸ್ಟಿಕ್ ಮೈಕ್ರೋ ಬೀಡ್ಸ್ ನಿಂದ ತಯಾರಿಸಿದ ವಸ್ತುಗಳ ಬಳಕೆ, ತಯಾರಿಕೆ, ಮಾರಾಟ, ಸರಬರಾಜು, ಸಂಗ್ರಹಣೆ ಮತ್ತು ವಿತರೆ ಮಾಡುವುದನ್ನು ನಿಷೇಧಿಸಲಾಗಿದೆ.
ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಿಲ್ಲಾಧಿಕಾರಿಗಳು ನಗರ ಸ್ಥಳೀಯ ಸಂಸ್ಥೆ ಮಟ್ಟದ ಕಾರ್ಯಪಡೆ (ಟಾಸ್ಕ್ಫೋರ್ಸ್ ಸಮಿತಿ) ರಚಿಸಿದ್ದಾರೆ. ಆದುದರಿಂದ ನಗರಸಭಾ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಸಂಗ್ರಹಣೆ, ಮಾರಾಟ, ವಿತರಣೆ, ತಯಾರಿಕೆ ಮತ್ತು ಸಾಗಾಣಿಕೆ ಮಾಡುವ ಅಂಗಡಿ ಮಳಿಗೆ, ಗೋಡಾನುಗಳನ್ನು ತಪಾಸಣೆ ಮಾಡಿ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭೆಯ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.