ಅಯೋಧ್ಯೆ ಮಂದಿರ-ಮಸೀದಿ ವಿವಾದ: ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಕಾರ
ಹೊಸದಿಲ್ಲಿ, ನ.12: ಅಯೋಧ್ಯೆ ಮಂದಿರ-ಮಸೀದಿ ವಿವಾದಕ್ಕೆ ಸಂಬಂಧಿಸಿ ಸಲ್ಲಿಸಿರುವ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ಇಂದು ನಿರಾಕರಿಸಿದೆ. ಈ ಅರ್ಜಿಯನ್ನು ಜನವರಿ ಮೊದಲ ವಾರದಲ್ಲಿ ವಿಚಾರಣೆಗೆ ಕೈಗೆತ್ತಿಕೊಳ್ಳಲು ಈಗಾಗಲೇ ನಿರ್ಧರಿಸಲಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.
ಜನವರಿಗಿಂತ ಮೊದಲೇ ಅಯೋಧ್ಯೆ ಪ್ರಕರಣದ ವಿಚಾರಣೆಯನ್ನು ಆರಂಭಿಸಬೇಕು ಎಂದು ಅಖಿಲ ಭಾರತ ಹಿಂದೂ ಮಹಾಸಭಾ ಉಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು.
‘‘ನಾವು ಈಗಾಗಲೇ ಈ ಕುರಿತಂತೆ ಆದೇಶವನ್ನು ಜಾರಿಗೊಳಿಸಿದ್ದೇವೆ. ಜನವರಿಯಲ್ಲಿ ಮೇಲ್ಮನವಿಗಳು ಬರಲಿವೆ’’ ಎಂದು ಮುಖ್ಯ ನ್ಯಾಯಾಧೀಶ ಜಸ್ಟಿಸ್ ರಂಜನ್ ಗೊಗೊಯ್ ಹೇಳಿದ್ದಾರೆ.
ಕಳೆದ ತಿಂಗಳು ಅಯೋಧ್ಯೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕು ನಿಮಿಷಗಳ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಜನವರಿಯಲ್ಲಿ ಅರ್ಜಿ ವಿಚಾರಣೆ ನಡೆಸಲಾಗುವುದು ಎಂದು ಹೇಳಿತ್ತು.
‘‘ನಮಗೆ ನಮ್ಮದೇ ಆದ ಆದ್ಯತೆಗಳಿವೆ’’ ಎಂದು ಹೇಳಿದ್ದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ 100 ವರ್ಷಗಳ ಹಳೆಯ ವಿವಾದವನ್ನು ಆದ್ಯತೆಯ ಮೇರೆಗೆ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು ಎಂದು ಉತ್ತರಪ್ರದೇಶ ಸರಕಾರದ ವಾದವನ್ನು ನ್ಯಾಯಾಲಯ ತಿರಸ್ಕರಿಸಿತ್ತು