ರಾಜ್ಯದ ಈ ಒಂಬತ್ತು ಜಿಲ್ಲೆಗಳಲ್ಲಿ ಹೆಲ್ಮೆಟ್ ಧರಿಸುವುದಕ್ಕೆ ವಿನಾಯಿತಿ: ಕಾರಣವೇನು ಗೊತ್ತೆ ?
ಬೆಂಗಳೂರು, ಮಾ.6: ಬಳ್ಳಾರಿ, ರಾಯಚೂರು, ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ, ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವುದರಿಂದ ವಿನಾಯಿತಿ ನೀಡಿ ರಾಜ್ಯ ಸರಕಾರ ಆದೇಶಿಸಿದೆ.
ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಹೈದರಾಬಾದ್ ಕರ್ನಾಟಕದ ಒಂಬತ್ತು ಜಿಲ್ಲೆಗಳ ಪೊಲೀಸ್ ಅಧೀಕ್ಷಕರಿಗೆ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಹಾಗೂ ಸಂಚಾರ ಮತ್ತು ರಸ್ತೆ ಸುರಕ್ಷತೆಯ ಆಯುಕ್ತರು ಸೂಚಿಸಿದ್ದಾರೆ.
ಬಳ್ಳಾರಿ ಜಿಲ್ಲೆ ಸೇರಿದಂತೆ ಹೈದರಾಬಾದ್ ಕರ್ನಾಟಕಕ್ಕೆ ಸೇರಿದ ರಾಯಚೂರು, ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ, ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಬಹಳ ಹೆಚ್ಚಾಗಿದೆ. ಬೇಸಗೆಯಲ್ಲಿ 45ರಿಂದ 46 ಡಿಗ್ರಿ ಸೆಲ್ಸಿಯಸ್ ವರೆಗೆ ಬಿಸಿಲಿನ ತಾಪಮಾನ ಇರುತ್ತದೆ. ಇಂತಹ ಬಿರುಬಿಸಿಲಿನಲ್ಲಿ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸುವುದರಿಂದ ಚರ್ಮ ಸಂಬಂಧಿ ಕಾಯಿಲೆಗಳಿಗೆ ತುತ್ತಾಗುವ ಸಾಧ್ಯತೆ ಅಧಿಕವಾಗಿದೆ. ಆದ್ದರಿಂದ ಈ ಅವಧಿಯಲ್ಲಿ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವುದರಿಂದ ವಿನಾಯಿತಿ ನೀಡುವಂತೆ ಒತ್ತಾಯ ಕೇಳಿಬರುತ್ತಿತ್ತು. ಈ ಹಿನ್ನೆಲೆಯಲ್ಲಿ ಹೆಲ್ಮೆಟ್ ಧರಿಸುವುದರಿಂದ ವಿನಾಯಿತಿ ನೀಡಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಸೂಚಿಸಿದ್ದಾರೆ.