ಮಕ್ಕಳ ಭವಿಷ್ಯ ಕಾಪಾಡಲು ಪೋಲಿಯೋ ಲಸಿಕೆ: ಡಾ.ಜಯಮಾಲಾ
ಉಡುಪಿ, ಮಾ.10: ಮಕ್ಕಳ ಭವಿಷ್ಯ ಆರೋಗ್ಯಕರವಾಗಿರುವ ದೃಷ್ಠಿಯಿಂದ ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ ಹೇಳಿದ್ದಾರೆ.
ಉಡುಪಿಯ ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ರವಿವಾರ ಮಕ್ಕಳಿಗೆ ಪೊಲಿಯೋ ಲಸಿಕೆ ಹಾಕುವ ಮೂಲಕ ಪಲ್ಸ್ ಪೋಲಿಯೋ ಕಾರ್ಯ ಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತಿದ್ದರು.
ಪೋಲಿಯೋ ಲಸಿಕೆ ಮಕ್ಕಳ ಬದುಕಿಗೆ ಅಮೃತ ಬಿಂದು. ಮಕ್ಕಳಿಗೆ ತಪ್ಪದೇ ಪೋಲಿಯೋ ಹಾಕಿಸುವ ಮೂಲಕ ಅವರ ಭವಿಷ್ಯವನ್ನು ಭದ್ರಗೊಳಿಸಬೇಕು. ಉಡುಪಿ ಜಿಲ್ಲೆಯಲ್ಲಿ 77740 ಮಕ್ಕಳಿಗೆ ಪೋಲಿಯೋ ಲಸಿಕೆ ನೀಡುವ ಗುರಿ ಇದ್ದು, ನಾಳೆಯಿಂದ 3 ದಿನಗಳ ಕಾಲ ಆಶಾ ಮತ್ತು ಅಂಗನವಾಡಿ ಕಾರ್ಯ ಕರ್ತೆಯರು ಮನೆ ಮನೆಗೆ ತೆರಳಿ ಬಿಟ್ಟುಹೋದ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲಿದ್ದಾರೆ ಎಂದರು.
ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಓಂ ಪ್ರಕಾಶ್ ಕಟ್ಟೀಮನಿ, ಜಿಲ್ಲಾ ಸರ್ಜನ್ ಡಾ.ಮಧು ಸೂದನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್, ಪಲ್ಸ್ ಪೋಲಿಯೋ ನೋಡೆಲ್ ಅಧಿಕಾರಿ ಡಾ.ಶೀನಪ್ಪ, ಆರ್ಸಿಎಚ್ ಅಧಿಕಾರಿ ಡಾ.ಎಂ.ಜಿ.ರಾಮ, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಯ ವೈದ್ಯಕೀಯ ಅಧೀಕ್ಷಕಿ ಡಾ.ಶಿಖಾ, ರೋಟರಿ ಕ್ಲಬ್ನ ಚಂದ್ರಶೇಖರ್ ಮೊದಲಾದವರು ಉಪಸ್ಥಿತರಿದ್ದರು.