ಕುಡಿಯುವ ನೀರು ಕುರಿತು ಉಡುಪಿ ಜಿಲ್ಲಾಧಿಕಾರಿ ಸಭೆ
ಉಡುಪಿ, ಮಾ.15: ಬೇಸಿಗೆಯ ಹಿನ್ನಲೆಯಲ್ಲಿ ತುರ್ತು ಕುಡಿಯುವ ನೀರು ಪೂರೈಕೆ ಮತ್ತು ಕೈಗೊಂಡ ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಯಲ್ಲಿ ಶುಕ್ರವಾರ ಸಭೆ ನಡೆಯಿತು.
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಪೂರೈಕೆ ಮಾಡುವ ಬಗ್ಗೆ ಪರಿಶೀಲಿಸಿ, ಸಮಸ್ಯೆ ಇರುವ ಕಡೆಗಳಲ್ಲಿ ಅವಶ್ಯಕತೆಗೆ ಅನುಗುಣವಾಗಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡುವಂತೆ, ಕುಡಿಯುವ ನೀರಿನ ಕೊರತೆ ಉಂಟಾಗ ದಂತೆ ಮುನ್ನೆಚ್ಚರಿಕೆಯನ್ನು ವಹಿಸಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸದಂತೆ ನೋಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.
2019ರ ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಕುಡಿಯುವ ನೀರು ಸರಬರಾಜು ಮಾಡುವ ಸಂದರ್ಭದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳುವಂತೆ ತಾಲೂಕು ತಹಶೀಲ್ದಾರರು ಮತ್ತು ಕಾರ್ಯನಿರ್ವಹಣಾಧಿಕಾರಿಗಳಿಗೆ ನಿರ್ದೇಶಿಸಿ, ಈ ಬಗ್ಗೆ ತಾಲೂಕು ಮಟ್ಟದ ಸಮಿತಿಯನ್ನು ರಚಿಸಿದರು.
ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿಂಧು ಬಿ. ರೂಪೇಶ್, ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಉಪಸ್ಥಿತರಿದ್ದರು.