ಬೆಳ್ತಂಗಡಿ: ಬಿಜೆಪಿ ಯುವ ಮುಖಂಡ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
ಬೆಳ್ತಂಗಡಿ, ಮಾ.30: ಬಿಜೆಪಿ ಯುವ ಮುಖಂಡ, ಪಕ್ಷದ ತಾಲೂಕು ಸಮಿತಿಯ ಅಧ್ಯಕ್ಷ ರಂಜನ್ ಜಿ. ಗೌಡ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
ಸಚಿವ ಯು.ಟಿ.ಖಾದರ್ ನೇತೃತ್ವದಲ್ಲಿ ಶುಕ್ರವಾರ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರನ್ನು ರಂಜನ್ ಭೇಟಿಯಾಗಿ ಈ ಬಗ್ಗೆ ಮಾತುಕತೆ ನಡೆಸಿದ್ದಾರೆ. ಸೋಮವಾರ ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಸಮಾವೇಶ ನಡೆಯಲಿದ್ದು, ಈ ಸಂದರ್ಭ ರಂಜನ್ ಅಧಿಕೃತವಾಗಿ ಕಾಂಗ್ರೆಸ್ ಪಾಳಯ ಸೇರಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಮಾಜಿ ಸಚಿವ ಕೆ.ಗಂಗಾಧರ ಗೌಡರ ಪುತ್ರರಾಗಿರುವ ರಂಜನ್ ಗೌಡ 2013ರ ವಿಧಾನಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಂಡಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅವರಿಗೆ ಅವಕಾಶ ನೀಡಿರಲಿಲ್ಲ. ರಂಜನ್ ಗೌಡ ಈ ಹಿಂದೆ ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.
ಬೆಳ್ತಂಗಡಿ ತಾಲೂಕಿನಲ್ಲಿ ಪ್ರಬಲವಾಗಿರುವ ಗಂಗಾಧರ ಗೌಡ ಮತ್ತು ಪುತ್ರ ಇದೀಗ ಕಾಂಗ್ರೆಸ್ ಪಕ್ಷಕ್ಕೆ ಮರಳಿ ಬಂದಿರುವುದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿದೆ. ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿ ಗಂಗಾಧರ ಗೌಡ ಅವರು ಗುಂಡೂರಾವ್ ಸರಕಾರದಲ್ಲಿ ಸಚಿವರಾಗಿದ್ದರು. ಆ ಬಳಿಕ ಅವರು ಬಿಜೆಪಿ ಸೇರಿದ್ದರು. ಆದರೆ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭ ಅವರು ಮತ್ತೆ ಕಾಂಗ್ರೆಸ್ ಪಾಳಯ ಸೇರಿದ್ದರು. ಇದೀಗ ಅವರ ಪುತ್ರ ಕೂಡಾ ಅದೇ ಹಾದಿ ಹಿಡಿದಿದ್ದಾರೆ.