ದ.ಕ. ಜಿಲ್ಲೆ: ಎ.18ರಂದು ಸಾರ್ವತ್ರಿಕ ರಜೆ
ಮಂಗಳೂರು, ಎ.12: ಚುನಾವಣಾ ಆಯೋಗದಿಂದ ಲೋಕಸಭೆ ಚುನಾವಣೆಯನ್ನು ಘೋಷಿಸಿದ್ದು, ಅದರಂತೆ ದ.ಕ. ಜಿಲ್ಲೆಯಲ್ಲಿ ಎ.18ರಂದು ಮತದಾನ ನಡೆಯಲಿದೆ. ಆ ದಿನದಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ.
ಮತದಾರರು ಮತಚಲಾಯಿಸಲು ಅನುಕೂಲವಾಗುವಂತೆ ರಾಜ್ಯ ಸರಕಾರಿ ಕಚೇರಿಗಳಿಗೆ, ಶಾಲಾ, ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳನ್ನೊಳಗೊಂಡಂತೆ) ಹಾಗೂ ಸರಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಎ.18ರಂದು ಸಾರ್ವತ್ರಿಕ ರಜೆಯನ್ನು ಘೋಷಿಸಿದೆ.
ಲೋಕಸಭಾ ಕ್ಷೇತ್ರಗಳ ಅರ್ಹ ಮತದಾರರಾಗಿರುವ ಎಲ್ಲ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಮತ್ತು ಇನ್ನಿತರ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಪ್ರಜಾಪ್ರಾತಿನಿಧ್ಯ ಕಾಯ್ದೆಯಡಿನ ಎಲ್ಲ ಉಪಬಂಧಗಳಿಗೆ ಒಳಪಟ್ಟು ವೇತನ ಸಹಿತ ರಜೆ ನೀಡಲು ಆದೇಶಿಸಲಾಗಿದೆ.
ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ. ಆದಾಗ್ಯೂ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲ ವಾಗುವಂತೆ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಪ್ರಕಟನೆ ತಿಳಿಸಿದೆ.