ಉಡುಪಿ: ರಾ.ಹೆದ್ದಾರಿ ಕಾಮಗಾರಿ ಡಿಸಿ, ಎಸ್ಪಿ ಪರಿಶೀಲನೆ
ಮಣಿಪಾಲ, ಮೇ 7: ಜಿಲ್ಲಾಧಿಕಾರಿ ಹೆಫ್ಸಿಬಾ ರಾಣಿ ಕೊರ್ಲಪಾಟಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಅವರು ಸಾರ್ವಜನಿಕ ರಿಂದ ಸಾಕಷ್ಟು ದೂರುಗಳು ಕೇಳಿಬರುತ್ತಿರುವ ಉಡುಪಿ-ಮಣಿಪಾಲ ರಸ್ತೆಯಲ್ಲಿ ರಾಷ್ಟ್ರೀಯ ಹೆದ್ದಾರಿ 169ಎ ಅಗಲೀಕರಣ ಕಾಮಗಾರಿ ಸ್ಥಳಕ್ಕೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.
ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಡೆಸುತ್ತಿರುವ ಹೆದ್ದಾರಿ ಅಗಲೀಕರಣ ಕಾಮಗಾರಿಯಿಂದ ಮಣಿಪಾಲದ ಹಲವು ಕಡೆಗಳಲ್ಲಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆಯುಂಟಾಗುತಿದ್ದು, ನಿರಂತರ ಅಪಘಾತಗಳು ನಡೆದು ಹಲವು ಮಂದಿ ಸಾವನ್ನಪ್ಪಿದ್ದಾರೆ ಎಂದು ದೂರಲಾಗಿತ್ತು.
ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ರಸ್ತೆ ಕಾಮಗಾರಿಯನ್ನು ತ್ವರಿತಗೊಳಿಸುವಂತೆ, ಜನರ ಮತ್ತು ವಾಹನಗಳ ಸಂಚಾರಕ್ಕೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳುವಂತೆ ಸ್ಪಷ್ಟ ಸೂಚನೆಗಳನ್ನು ನೀಡಿದರು.
ಒಳಚರಂಡಿ ಕಾಮಗಾರಿ ಹಾಗೂ ಸುರಕ್ಷತೆಗೆ ಸಂಬಂಧಿಸಿದ ಕಾಮಗಾರಿ ಗಳನ್ನು ಮಳೆಗಾಲ ಆರಂಭವಾಗುವುದರ ಒಳಗೆ ಪೂರ್ಣಗೊಳಿಸಲು ಅವರು ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.