ಉಡುಪಿ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ; ಗ್ರಾಪಂಗಳಿಗೆ ನೋಡೆಲ್ ಅಧಿಕಾರಿಗಳ ನೇಮಕ
ಉಡುಪಿ, ಮೇ 9: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಸಮರ್ಪಕವಾಗಿ ನಿರ್ವಹಿಸಲು ಪ್ರತೀ ಗ್ರಾಮ ಪಂಚಾಯತ್ ಗಳಿಗೆ ನೋಡೆಲ್ ಅಧಿಕಾರಿಗಳನ್ನು ನೇಮಿಸಲಾಗುವುದು ಎಂದು ಜಿಪಂನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿಂಧು ಬಿ ರೂಪೇಶ್ ತಿಳಿಸಿದ್ದಾರೆ.
ಗುರುವಾರ ಮಣಿಪಾಲದಲ್ಲಿರುವ ಜಿಪಂ ಸಭಾಂಗಣದಲ್ಲಿ ಜಿಲ್ಲೆಯ ಕುಡಿಯುವ ನೀರಿನ ಪರಿಸ್ಥಿತಿ ಕುರಿತು ಸರ್ಚಿಸಲು ಕರೆಯಲಾದ ಇಂಜಿನಿಯರ್ ಗಳ ಸಭೆಯನ್ನುದ್ದೇಶಿಸಿ ಅವರು ಮಾತನಾಡುತಿದ್ದರು.
ಕುಡಿಯುವ ನೀರಿನ ವ್ಯವಸ್ಥಿತ ನಿರ್ವಹಣೆ, ಟ್ಯಾಂಕರ್ ಮೂಲಕ ನೀರು ಸರಬರಾಜು ಸೇರಿದಂತೆ ಪ್ರತೀ ಗ್ರಾಪಂನಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರು ಲಭ್ಯವಾಗುವುದರಲ್ಲಿ ಯಾವುದೇ ಸಮಸ್ಯೆ ಎದುರಾಗದಂತೆ ನೋಡೆಲ್ ಅಧಿಕಾರಿಗಳು ನಿಗಾ ವಹಿಸಲಿದ್ದಾರೆ ಎಂದು ಅವರು ಹೇಳಿದರು.
ಪ್ರಸಕ್ತ ಟ್ಯಾಂಕರ್ ನೀರು ಸರಬರಾಜಾಗುವ ಪ್ರದೇಶಗಳಲ್ಲಿ ಮುಂದಿನ ವರ್ಷದಿಂದ ಖಾಯಂ ನೀರಿನ ಮೂಲ ಸೃಷ್ಟಿಯಾಗುವಂತೆ ಮುಂದಿನ ಕ್ರಿಯಾ ಯೋಜನೆಯಲ್ಲಿ ಅಳವಡಿಸಬೇಕು. ಹೊಸದಾಗಿ ಬೋರ್ವೆಲ್ ಕೊರೆತ, ವಿದ್ಯುತ್ ಸಂಪರ್ಕ, ನೀರು ಸರಬರಾಜು ಕೊಳವೆ, ರೀಚಾರ್ಜ್ ಮಾಡುವುದು ಸೇರಿದಂತೆ ಎಲ್ಲಾ ಕಾಮಗಾರಿಗಳನ್ನು ಒಂದೇ ಅಂದಾಜು ಪಟ್ಟಿಯಲ್ಲಿ ಸೇರಿಸಬೇಕು. ಪದೇ ಪದೇ ಅಂದಾಜು ಪಟ್ಟಿಯಲ್ಲಿ ಬದಲಾವಣೆ ಸಾಧ್ಯವಿಲ್ಲ ಎಂದು ಅವರು ಹೇಳಿದರು.
30 ಲಕ್ಷ ರೂ.ವರೆಗಿನ ಕುಡಿಯುವ ನೀರಿನ ಕಾಮಗಾರಿಗಳಿಗೆ ಸಂಪೂರ್ಣ ಅನುದಾನ ಬಂದ ಬಳಿಕವಷ್ಟೇ ಕಾಮಗಾರಿ ನಡೆಸಬೇಕು ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ತಿಳಿಸಿದರು.
ಸಭೆಯಲ್ಲಿ ಜಿಪಂ ಉಪಕಾರ್ಯದರ್ಶಿ ನಾಗೇಶ್ ರಾಯ್ಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಉಪಸ್ಥಿತರಿದ್ದರು.