ಎ.ಕೆ.ಸುಬ್ಬಯ್ಯ ನಿಧನಕ್ಕೆ ಸಿಎಂ ಬಿಎಸ್ವೈ, ಮಾಜಿ ಸಿಎಂ, ಮಾಜಿ ಪ್ರಧಾನಿ ಸಂತಾಪ
ಬೆಂಗಳೂರು, ಆ,27: ಹಿರಿಯ ಮುತ್ಸದ್ದಿ, ರಾಜಕಾರಣಿ, ಹೋರಾಟಗಾರ ಎ.ಕೆ.ಸುಬ್ಬಯ್ಯ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿದ ಅತ್ಯಂತ ನಿಷ್ಠುರ ನಾಯಕ ಎ.ಕೆ.ಸುಬ್ಬಯ್ಯ ಅವರು ಅನ್ಯಾಯದ ವಿರುದ್ಧ ಸದಾ ಹೋರಾಡಿದವರು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಮರಿಸಿದ್ದಾರೆ.
ಅವರ ನಿಧನದಿಂದ ರಾಜ್ಯ ಒಬ್ಬ ನೇರ, ನಿಷ್ಠುರ ನಾಯಕನನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಭಗವಂತ ಅವರ ಕುಟುಂಬದವರಿಗೆ ದು:ಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಸಿದ್ದರಾಮಯ್ಯ ಸಂತಾಪ
ನೇರ, ದಿಟ್ಟ ಮಾತುಗಳಿಂದ ಸಮಕಾಲೀನ ವಿದ್ಯಮಾನಗಳಿಗೆ ನಿರ್ಭೀತಿಯಿಂದ ಪ್ರತಿಕ್ರಿಯಿಸುತ್ತಾ ನಮ್ಮ ಆತ್ಮಸಾಕ್ಷಿಯಂತಿದ್ದ ಹಿರಿಯ ಹೋರಾಟಗಾರ ಎ.ಕೆ.ಸುಬ್ಬಯ್ಯ ಸಾವಿನಿಂದ ವೈಯಕ್ತಿಕವಾಗಿ ನಾನು ಒಬ್ಬ ಸ್ನೇಹಿತನನ್ನು ಕಳೆದುಕೊಂಡಿದ್ದೇನೆ. ನಾಡು ಮಾರ್ಗದರ್ಶಕನನ್ನು ಕಳೆದುಕೊಂಡು ಬಡವಾಗಿದೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಮಾಜಿ ಪ್ರಧಾನಿ ಸಂತಾಪ
ಜನಸಂಘದಿಂದ ಬಂದು, ಬಿಜೆಪಿ ರಾಜ್ಯಾಧ್ಯಕ್ಷರಾಗಿ ಹಲವಾರು ಸಮಾಜಮುಖಿ ಹೋರಾಟಗಳಲ್ಲಿ ಭಾಗಿಯಾಗಿರುವ ಎ.ಕೆ.ಸುಬ್ಬಯ್ಯನವರು ಅಗಲಿರುವ ಸುದ್ದಿ ಕೇಳಿ ತೀವ್ರ ದುಃಖವಾಗಿದೆ. ಅವರು ನನ್ನ ಆತ್ಮೀಯ ಸ್ನೇಹಿತರಾಗಿದ್ದು, ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ನನ್ನ ಜೊತೆ ಸೆರೆಮನೆ ವಾಸವನ್ನು ಅನುಭವಿಸಿದ್ದರು. ನಿಧನರಾದ ಸುಬ್ಬಯ್ಯನವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಟ್ವೀಟ್ ಮಾಡಿದ್ದಾರೆ.