ನೆರೆ ಸಂತ್ರಸ್ತರ ನಿರ್ಲಕ್ಷ್ಯ ಆರೋಪ: ಯುವ ಕಾಂಗ್ರೆಸ್ ಪ್ರತಿಭಟನೆ
ಬೆಂಗಳೂರು, ಅ.12: ಉತ್ತರ ಕರ್ನಾಟಕ ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳೆರಡು ಸಂಪೂರ್ಣವಾಗಿ ವಿಫಲವಾಗಿವೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಶನಿವಾರ ನಗರದಲ್ಲಿ ವಿಧಾನಸೌಧ ಮುತ್ತಿಗೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ರಾಜ್ಯ ಸರಕಾರ ನೆರೆ ಸಂತ್ರಸ್ತರ ಸಹಾಯಕ್ಕೆ ಧಾವಿಸಿಲ್ಲ. ಅವರ ಬದುಕು ಕಷ್ಟಕರವಾಗಿದ್ದರೂ, ಯಾವುದೇ ಕ್ರಮ ಕೈಗೊಳ್ಳದೆ, ನಿರ್ಲಕ್ಷ್ಯ ವಹಿಸಿದೆ ಎಂದು ದೂರಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಉತ್ತರ ಕರ್ನಾಟಕದಲ್ಲಿ ನೆರೆಯಿಂದಾಗಿ ಕೋಟ್ಯಂತರ ರೂ. ಆಸ್ತಿ ಪಾಸ್ತಿ ನಷ್ಟವಾಗಿದೆ. ಲಕ್ಷಾಂತರ ಜನರು ಮನೆ, ಮಠ ಕಳೆದುಕೊಂಡು ನಿರ್ವಸತಿಗರಾಗಿದ್ದಾರೆ. ಸಾಕಷ್ಟು ಶಾಲಾ ಕಟ್ಟಡಗಳು ಕುಸಿದು ಬಿದ್ದು, ಆ ಭಾಗದ ಮಕ್ಕಳು ಶೈಕ್ಷಣಿಕ ಸಮಸ್ಯೆ ಅನುಭವಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ರಾಜ್ಯ ಹಾಗೂ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರಕಾರ ನೆರೆ ಸಂತ್ರಸ್ತರ ಸಮಸ್ಯೆ ಪರಿಹಾರಕ್ಕಾಗಿ ಸೂಕ್ತ ಅನುದಾನ ಬಿಡುಗಡೆ ಮಾಡುವಲ್ಲಿ ನಿರ್ಲಕ್ಷ ತಳೆದಿದೆ ಎಂದು ಆರೋಪಿಸಿದ ಅವರು, ನೆರೆ ಸಂತ್ರಸ್ತರ ಪರಿಹಾರಕ್ಕಾಗಿ 3800 ಕೋಟಿ ರೂ.ಗಳ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ ಕೇಂದ್ರ ಸರಕಾರ ಕೇವಲ 1200 ಕೋಟಿ. ರೂ.ಗಳನ್ನು ಮಾತ್ರ ಬಿಡುಗಡೆ ಮಾಡಿದೆ ಎಂದು ಹೇಳಿದರು.
ನೆರೆಸಂತ್ರಸ್ಥರ ಎಲ್ಲಾ ಪರಿಹಾರಕ್ಕಾಗಿ 42 ಸಾವಿರ ಕೋಟಿ ರೂ.ಗಳನ್ನು ತಕ್ಷಣ ಕೇಂದ್ರ ಬಿಡುಗಡೆ ಮಾಡಬೇಕು. ನಿರ್ಲಕ್ಷವಹಿಸಿದರೆ ಮುಂದಿನ ದಿನಗಳಲ್ಲಿ ರಾಜ್ಯ ಬಂದ್ಗೆ ಕರೆ ನೀಡುವ ಮೂಲಕ ರಾಜ್ಯ ಹಾಗೂ ಕೇಂದ್ರ ಸರಕಾರಗಳಿಗೆ ಬಿಸಿ ಮುಟ್ಟಿಸಲಾಗುವುದು ಎಂದರು. ಪ್ರತಿಭಟನೆಯಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಸನಗೌಡ ಬಾದರ್ಲಿ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.
‘ರಾಷ್ಟ್ರೀಯ ವಿಪತ್ತು’
ರಾಜ್ಯದಲ್ಲಿ ಸಂಭವಿಸಿದ ನೆರೆಹಾವಳಿಯಲ್ಲಿ ಭಾರಿ ಪ್ರಮಾಣದ ಕಷ್ಟನಷ್ಟ ಸಂಭವಿಸಿದ ಹಿನ್ನೆಲೆಯಲ್ಲಿ ‘ರಾಷ್ಟ್ರೀಯ ವಿಪತ್ತು’ ಎಂದು ಕೇಂದ್ರ ಸರಕಾರ ಘೋಷಿಸಬೇಕು. ಜತೆಗೆ ಮೂಗಿಗೆ ತುಪ್ಪಸವರುವ ಕೆಲಸ ಬಿಡಬೇಕು.
-ಈಶ್ವರ್ ಖಂಡ್ರೆ, ಕಾರ್ಯಾಧ್ಯಕ್ಷ, ಕೆಪಿಸಿಸಿ