ಬಿಬಿಎಂಪಿ ವ್ಯಾಪ್ತಿಯ 4 ಕ್ಷೇತ್ರಗಳಿಗೆ ಮಾತ್ರ ನೀತಿ ಸಂಹಿತೆ ಅನ್ವಯ: ಆಯುಕ್ತ ಅನಿಲ್ ಕುಮಾರ್
ಉಪ ಚುನಾವಣೆ: ನ.18ರಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನ
ಬೆಂಗಳೂರು, ನ. 11: ಉಪಚುನಾವಣೆ ನಡೆಯುವ 15 ಕ್ಷೇತ್ರಗಳಿಗೆ ಭಾನುವಾರ ರಾತ್ರಿಯಿಂದ ನೀತಿ ಸಂಹಿತೆ ಜಾರಿಯಲ್ಲಿದ್ದು, ಬಿಬಿಎಂಪಿ ವ್ಯಾಪ್ತಿಯ ನಾಲ್ಕು ಕ್ಷೇತ್ರಗಳಿಗೆ ಮಾತ್ರ ನೀತಿ ಸಂಹಿತೆ ಅನ್ವಯವಾಗಲಿದೆ ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ತಿಳಿಸಿದರು.
ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯ ನಾಲ್ಕು ಕ್ಷೇತ್ರಗಳಾದ ಕೆ.ಆರ್. ಪುರ, ಯಶವಂತಪುರ, ಮಹಾಲಕ್ಷ್ಮೀ ಲೇಔಟ್ ಮತ್ತು ಶಿವಾಜಿ ನಗರ ಕ್ಷೇತ್ರಗಳಿಗೆ ಮಾತ್ರ ನೀತಿ ಸಂಹಿತೆ ಅನ್ವಯವಾಗಲಿದೆ. ನಾಮಪತ್ರ ಸಲ್ಲಿಕೆ ಸೋಮವಾರದಿಂದ ಪ್ರಾರಂಭವಾಗಿದ್ದು, ನ.18ರಂದು ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿದೆ. ಅಲ್ಲಿಯವರೆಗೂ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶವಿದೆ ಎಂದು ತಿಳಿಸಿದರು.
ಹೊಸದಾಗಿ ಮತದಾರರ ಪಟ್ಟಿಗೆ ನಾಲ್ಕು ಕ್ಷೇತ್ರಗಳಿಂದ ಒಟ್ಟು 50,862 ಅರ್ಜಿಗಳು ಬಂದಿದ್ದು, 27,373 ಅರ್ಜಿಗಳನ್ನು ಸೇರ್ಪಡೆಗೊಳಿಸಲಾಗಿದೆ, ಉಳಿದ ಅರ್ಜಿಗಳು ಪರಿಶೀಲನಾ ಹಂತದಲ್ಲಿವೆ ಎಂದು ಮಾಹಿತಿ ನೀಡಿದರು.
ಸೂಕ್ಷ್ಮ ಮತ್ತು ಅತೀಸೂಕ್ಷ್ಮ ಮತಗಟ್ಟೆಗಳ ಬಗ್ಗೆ ಪರಿಶೀಲನೆ ನಡೆಸಿ ಶೀಘ್ರದಲ್ಲಿ ಚೆಕ್ಪೋಸ್ಟ್ಗಳ ನಿರ್ಮಾಣ, ಭದ್ರತಾ ಸಿಬ್ಬಂದಿಗಳ ನಿಯೋಜನೆ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಡಿ.5ರಂದು ನಡೆಯುವ ಉಪಚುನಾವಣೆಗೆ ಕೆ.ಆರ್. ಪುರದಿಂದ 437 ಮತಗಟ್ಟೆ, ಯಶವಂತಪುರದಿಂದ 437, ಮಹಾಲಕ್ಷ್ಮೀ ಲೇಔಟ್ 270, ಶಿವಾಜಿನಗರ- 173 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ನಾಲ್ಕು ಕ್ಷೇತ್ರಗಳಿಂದ ಒಟ್ಟು 14,32,394 ಮತದಾರರಿದ್ದಾರೆ ಎಂದು ತಿಳಿಸಿದರು.
ಅಕ್ರಮ ವಲಸಿಗರ ಪತ್ತೆಗೆ ಕ್ರಮ: ಮತದಾರರ ಪಟ್ಟಿಯಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರನ್ನು ಪತ್ತೆ ಹಚ್ಚಿ ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗುವುದು. ಬಾಂಗ್ಲಾ ವಲಸಿಗರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತ ಅನಿಲ್ ಕುಮಾರ್ ತಿಳಿಸಿದರು.