ಹಳ್ಳಿಗಳಿಗೆ ಹಿಂದಿರುಗಿದ ವಲಸಿಗ ಕಾರ್ಮಿಕರಿಗೆ ಉದ್ಯೋಗ ಒದಗಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ
ಬೆಂಗಳೂರು, ಮೇ 20: ಕೊರೋನ ಸೋಂಕು ತಡೆಗಟ್ಟಲು ಹೇರಿರುವ ಲಾಕ್‍ಡೌನ್ ಹಿನ್ನೆಲೆಯಲ್ಲಿ ವಲಸಿಗ ಕಾರ್ಮಿಕರು ತಮ್ಮ ಹಳ್ಳಿಗಳಿಗೆ ಹಿಂದಿರುಗಿದ್ದು, ಅವರಿಗೆ ಉದ್ಯೋಗ ಖಾತರಿ ಯೋಜನೆಯಡಿ ಉದ್ಯೋಗ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು, ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬುಧವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, 2020-21ನೆ ಸಾಲಿನಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ 13 ಕೋಟಿ ಮಾನವ ದಿನಗಳ ಸೃಜನೆಯ ಗುರಿ ಹಾಗೂ 6,315.79 ಕೋಟಿ ರೂಪಾಯಿ ಅನುದಾನ ನಿಗದಿಪಡಿಸಲಾಗಿದೆ ಎಂದರು. ಅಲ್ಲದೆ, ಕೇಂದ್ರ ಸರಕಾರವೂ ಉದ್ಯೋಗ ಖಾತರಿ ಯೋಜನೆಗೆ 40 ಸಾವಿರ ಕೋಟಿ ರೂ.ಹೆಚ್ಚುವರಿ ಅನುದಾನ ನಿಗದಿಪಡಿಸಿರುವ ಹಿನ್ನೆಲೆಯಲ್ಲಿ ವಲಸಿಗ ಕಾರ್ಮಿಕರಿಗೆ ಉದ್ಯೋಗ ದೊರೆಯುವಂತೆ ಹಾಗೂ ನಿಗದಿತ ಅವಧಿಯಲ್ಲಿ ವೇತನ ಪಾವತಿಸಲು ಕ್ರಮ ವಹಿಸಬೇಕು ಎಂದು ಯಡಿಯೂರಪ್ಪ ಇದೇ ವೇಳೆ ನಿರ್ದೇಶನ ನೀಡಿದರು.
ಟಾಸ್ಕ್ ಫೋರ್ಸ್ ರಚನೆ: ಕೊರೋನ ವೈರಸ್ ಸೋಂಕು ನಿರ್ವಹಣೆಗೆ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಬೇಕು. ಅಲ್ಲದೆ, ಈ ಸಂಬಂಧ ಜನಜಾಗೃತಿ ಮೂಡಿಸಬೇಕು. ಲಾಕ್‍ಡೌನ್ ಅವಧಿಯಲ್ಲಿ ಅಗತ್ಯ ವಸ್ತುಗಳು ಜನರ ಮನೆ ಬಾಗಿಲಿಗೆ ವಿತರಣೆ, ಸರಕಾರದ ಸೌಲಭ್ಯಗಳನ್ನು ಜನರಿಗೆ ತಲುಪಿಸಬೇಕು ಎಂದರು.
ವಲಸೆ ಕಾರ್ಮಿಕರ ಮನೆ ಮನೆಗೆ ಭೇಟಿ ನೀಡಿ ಹೋಮ್ ಕ್ವಾರಂಟೈನ್ ಪರಿಶೀಲನೆ ಸೇರಿದಂತೆ ದೈನಂದಿನ ಮಾಹಿತಿ ಸಂಗ್ರಹಿಸಬೇಕು. ಸಾಂಸ್ಥಿಕ ಕ್ವಾರಂಟೈನ್ ನಿರ್ವಹಣೆ ಮೇಲ್ವಿಚಾರಣೆ ವಹಿಸುತ್ತಿದೆ. ಅಲ್ಲದೆ, ಸ್ವಸಹಾಯ ಸಂಘಗಳು 8 ಲಕ್ಷ ಮಾಸ್ಕ್ ತಯಾರಿಸಿ ವಿತರಿಸುತ್ತಿದೆ. ಇದರಿಂದ ಗ್ರಾಮೀಣ ಪ್ರದೇಶದ ಜನರಲ್ಲಿ ಆತ್ಮವಿಶ್ವಾಸ ಮೂಡಿಸಲು ಸಾಧ್ಯವಾಗಿದೆ ಎಂದು ಯಡಿಯೂರಪ್ಪ ಮೆಚ್ಚುಗೆ ವ್ಯಕ್ತಪಡಿಸಿದರು.
ಟ್ಯಾಂಕರ್ ಮೂಲಕ ನೀರು ಪೂರೈಕೆ: ಬೇಸಿಗೆ ಸಂದರ್ಭದಲ್ಲಿ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆ ಆಗದಂತೆ ಎಚ್ಚರ ವಹಿಸಬೇಕು. ಬೇಸಿಗೆಯಲ್ಲಿ ನೀರಿನ ಸಮಸ್ಯೆ ಇರುವ 14 ಜಿಲ್ಲೆಗಳಲ್ಲಿ 659 ಗ್ರಾಮಗಳಲ್ಲಿ 389 ಟ್ಯಾಂಕರ್ ಮತ್ತು 706 ಖಾಸಗಿ ಬೋರ್‍ವೆಲ್‍ಗಳಿಂದ ನೀರು ಪೂರೈಕೆ ಒಳ್ಳೆಯದು. ಈ ಬಗ್ಗೆ ಅಧಿಕಾರಿಗಳು ಸೂಕ್ತ ನಿಗಾ ವಹಿಸಬೇಕು ಎಂದರು.
ಕೇಂದ್ರದ ಜಲ ಜೀವನ್ ಮಿಷನ್ ಯೋಜನೆ, ರಾಜ್ಯ ಸರಕಾರದ ಜಲಧಾರೆ, ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆ ಸೇರಿದಂತೆ ಗ್ರಾಮೀಣಾಭಿವೃದ್ಧಿ ಇಲಾಖೆ ವಿವಿಧ ಯೋಜನೆಗಳ ಬಗ್ಗೆ ಸಭೆಯಲ್ಲಿ ಸಮಾಲೋಚನೆ ನಡೆಸಲಾಯಿತು. ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್, ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.