ಉಡುಪಿ: 47 ಮಂದಿಗೆ ಕೋವಿಡ್ ಪಾಸಿಟಿವ್
ಉಡುಪಿ, ಅ.31: ಜಿಲ್ಲೆಯಲ್ಲಿ ಕೋವಿಡ್ ಸೋಂಕು ರವಿವಾರ 47 ಮಂದಿ ಯಲ್ಲಿ ಹೊಸದಾಗಿ ಪತ್ತೆಯಾಗಿದೆ. ಶನಿವಾರ 143 ಮಂದಿ ಚಿಕಿತ್ಸೆಯಿಂದ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.
ಇಂದು ಪಾಸಿಟಿವ್ ಬಂದ 47 ಮಂದಿಯಲ್ಲಿ ಮಕ್ಕಳು ಸೇರಿದಂತೆ 26 ಮಂದಿ ಪುರುಷರು ಹಾಗೂ 21 ಮಂದಿ ಮಹಿಳೆಯರಿದ್ದಾರೆ. ಇವರಲ್ಲಿ 6 ಪುರುಷರು ಹಾಗೂ 7 ಮಹಿಳೆಯರಲ್ಲಿ ರೋಗದ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ. ಉಡುಪಿ ತಾಲೂಕಿನ 21, ಕುಂದಾಪುರ ತಾಲೂಕಿನ 20 ಹಾಗೂ ಕಾರ್ಕಳ ತಾಲೂಕಿನ 6 ಮಂದಿ ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ ಎಂದು ಡಾ.ಸೂಡ ಹೇಳಿದ್ದಾರೆ.
ದಿನದಲ್ಲಿ ಪಾಸಿಟಿವ್ ಬಂದ 47 ಮಂದಿಯಲ್ಲಿ ಇಬ್ಬರು ಮಾತ್ರ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದರೆ, ಉಳಿದ 45 ಮಂದಿ ತಮ್ಮ ತಮ್ಮ ಮನೆಗಳಲ್ಲೇ ಹೋಮ್ ಐಸೋಲೇಷನ್ನಲ್ಲಿದ್ದು ಚಿಕಿತ್ಸೆ ಪಡೆಯುತಿದ್ದಾರೆ ಎಂದು ಡಿಎಚ್ಓ ತಿಳಿಸಿದರು.
143 ಮಂದಿ ಗುಣಮುಖ: ಶನಿವಾರ ಜಿಲ್ಲೆಯಲ್ಲಿ 143 ಮಂದಿ ಸೋಂಕಿ ನಿಂದ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಈ ಮೂಲಕ ಸೋಂಕಿನಿಂದ ಮುಕ್ತರಾಗಿ ಮನೆಗೆ ತೆರಳಿದವರ ಒಟ್ಟು ಸಂಖ್ಯೆ 21,095 ಆಗಿದೆ. ಜಿಲ್ಲೆಯಲ್ಲಿ ಸದ್ಯ 657 ಮಂದಿ ಸಕ್ರಿಯ ಕೋವಿಡ್ ಸೋಂಕಿತ ರಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಮತ್ತು ಮನೆಗಳ ಹೋಮ್ ಐಸೋಲೇಷನ್ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದವರು ವಿವರಿಸಿದರು.
ಪಾಸಿಟಿವ್ ಪ್ರಮಾಣ ಶೇ.2.25: ಜಿಲ್ಲೆಯಲ್ಲಿ ಶನಿವಾರ ಒಟ್ಟು 2088 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿತ್ತು. ಇವರಲ್ಲಿ 2039 ಮಂದಿ ನೆಗೆಟಿವ್ ಬಂದಿದ್ದು, 49 (ಐಸಿಎಂಆರ್ ವರದಿ)ಮಂದಿ ಮಾತ್ರ ಪಾಸಿಟಿವ್ ಬಂದಿದ್ದಾರೆ. ಇದರಿಂದ ಜಿಲ್ಲೆಯ ಪಾಸಿಟಿವ್ ಪ್ರಮಾಣ ಇಂದು ಶೇ.2.25ಕ್ಕೆ ಇಳಿದಿದೆ. ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 21,933 ಆಗಿದೆ.
ಜಿಲ್ಲೆಯಲ್ಲಿ ಶನಿವಾರದವರೆಗೆ ಒಟ್ಟು 1,85,587 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ 1,63,654 ಮಂದಿ ನೆಗೆಟಿವ್ ಹಾಗೂ 21,933 ಮಂದಿ ಪಾಸಿಟಿವ್ ಬಂದಿದ್ದಾರೆ. ಈಗಾಗಲೇ 21,095 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಒಟ್ಟು 182 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಸತತ ಮೂರನೇ ದಿನವೂ ಕೋವಿಡ್ ಸೋಂಕಿನಿಂದ ಯಾರೂ ಮೃತಪಟ್ಟಿಲ್ಲ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ದೈನಂದಿನ ಬುಲೆಟಿನ್ನಲ್ಲಿ ತಿಳಿಸಲಾಗಿದೆ.