ಬಾಲಕಾರ್ಮಿಕ/ಕಿಶೋರ ಕಾರ್ಮಿಕರ ನೇಮಕ ಅಪರಾಧ
ಉಡುಪಿ, ಡಿ.19: ಜಿಲ್ಲೆಯಲ್ಲಿ ಕೋವಿಡ್-19ರ ಹಿನ್ನೆಲೆಯಲ್ಲಿ ಉಂಟಾದ ಆರ್ಥಿಕ ಮತ್ತು ಕಾರ್ಮಿಕ ಮಾರುಕಟ್ಟೆಯ ಸಂಕಷ್ಟ, ಜನರ ಜೀವನ ಹಾಗೂ ಜೀವನೋಪಾಯದ ಮೇಲೆ ಪರಿಣಾಮ ಬೀರಿದೆ. ಈ ಬಿಕ್ಕಟ್ಟು ಸಾವಿರಾರು ದುರ್ಬಲ ಮಕ್ಕಳನ್ನು ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಪದ್ಧತಿಗೆ ತಳ್ಳುವ ಅವಕಾಶವಿದ್ದು, ಇವರನ್ನು ಹೋಟೆಲ್, ಬಾರ್, ಅಂಗಡಿಗಳಲ್ಲಿ ದುಡಿಸಿಕೊಳ್ಳುತ್ತಿರುವ ಸಾಧ್ಯತೆಗಳಿವೆ.
ಆದ್ದರಿಂದ ಬಾಲ್ಯಾವಸ್ಥೆಯ/ಕಿಶೋರಾವಸ್ಥೆಯ ಕಾರ್ಮಿಕರನ್ನು ಕೆಲಸಕ್ಕೆ ನೇಮಕವಾಗದಂತೆ ಕ್ರಮವಹಿಸಲು ಉಡುಪಿಯ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘ ಉಡುಪಿ ಇವರ ಸಹಭಾಗಿತ್ವದಲ್ಲಿ ಈಗಾಗಲೇ ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಅನಿರೀಕ್ಷಿತ ತಪಾಸಣೆಯನ್ನು ಹಮ್ಮಿಕೊಳ್ಳಲಾಗುತ್ತಿದೆ ಹಾಗೂ ಅನಿರೀಕ್ಷಿತ ತಪಾಸಣೆ ವೇಳೆ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ 2016ರ ಬಗ್ಗೆ ಅರಿವು ಮೂಡಿಸಲಾಗುತ್ತಿದೆ.
ಕಾಯ್ದೆಯ ಪ್ರಕಾರ ಎಲ್ಲಾ ರೀತಿಯ ಉದ್ಯೋಗಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ. 15ರಿಂದ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದನ್ನು ನಿಷೇಧಿಸಲಾಗಿದೆ. ಬಾಲ ಕಾರ್ಮಿಕ/ ಕಿಶೋರ ಕಾರ್ಮಿಕರನ್ನು ನಿಯೋಜಿಸಿಕೊಂಡಲ್ಲಿ ಅಂತಹ ಮೊದಲ ಅಪರಾಧಕ್ಕೆ ಮಾಲಕರಿಗೆ 6 ತಿಂಗಳಿಂದ 2 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 20,000 ರೂ.ನಿಂದ 50,000 ರೂ.ವರೆಗೆ ದಂಡ ಅಥವಾ ಎರಡನ್ನು ವಿಧಿಸಲು ಕಾಯ್ದೆಯಡಿ ಅವಕಾಶವಿದೆ.
14 ವರ್ಷದೊಳಗಿನ ಮಕ್ಕಳನ್ನು ಹಾಗೂ 15ರಿಂದ 18 ವರ್ಷದೊಳಗಿನ ವಯಸ್ಸಿನ ಕಿಶೋರ ಕಾರ್ಮಿಕರನ್ನು ದುಡಿಸುತಿದ್ದಲ್ಲಿ ಮಾಹಿತಿಯನ್ನು ಚೈಲ್ಡ್ ಲೈನ್ 1098 ಅಥವಾ 0820-2574851/ 0820-2574977 ದೂರವಾಣಿ ಸಂಖ್ಯೆಗಳಿಗೆ ಕರೆಮಾಡಿ ತಿಳಿಸಬಹುದು ಎಂದು ಕಾರ್ಮಿ ಅಧಿಕಾರಿ ಕುಮಾರ್ ಬಿ. ತಿಳಿಸಿದ್ದಾರೆ.