ಬೆಂಗಳೂರು: ಅತ್ಯಾಚಾರ ಆರೋಪಿಗೆ 10 ವರ್ಷ ಜೈಲು ಶಿಕ್ಷೆ
ಬೆಂಗಳೂರು, ಎ.14: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪ ಸಾಬೀತಾದ ಹಿನ್ನೆಲೆ ಅಪರಾಧಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂಪಾಯಿ ದಂಡ ವಿಧಿಸಿ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಆರ್ಟಿ ನಗರ ನಿವಾಸಿ ಯಶೋವರ್ಧನ ರೆಡ್ಡಿ ಶಿಕ್ಷೆಗೆ ಒಳಗಾಗಿರುವ ಆರೋಪಿ ಎಂದು ತಿಳಿದುಬಂದಿದೆ.
2014ರ ಜನವರಿಯಲ್ಲಿ ಯಶೋವರ್ಧನ ರೆಡ್ಡಿ, ಪರಿಚಿತ ಬಾಲಕಿಯನ್ನು ಪುಸಲಾಯಿಸಿ ಮನೆಗೆ ಕರೆದೊಯ್ದು ಮದ್ಯ ಸೇವನೆ ಮಾಡಿಸಿದ್ದ. ನಂತರ ಅಮಲಿನಲ್ಲಿದ್ದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ. ಕೃತ್ಯ ಬೆಳಕಿಗೆ ಬಂದ ನಂತರ ಪೋಷಕರು ಆರೋಪಿ ವಿರುದ್ಧ ದೂರು ನೀಡಿದ್ದರು.
ಈ ಸಂಬಂಧ ಹೆಬ್ಬಾಳ ಠಾಣೆ ಪೊಲೀಸರು ಆರೋಪಿ ಯಶೋವರ್ಧನ ರೆಡ್ಡಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 ಹಾಗೂ ಪೋಕ್ಸೋ ಕಾಯ್ದೆಯ ಸೆಕ್ಷನ್ 6, 5(ಎಲ್)(ಜೆ) ಅಡಿ ಪ್ರಕರಣ ದಾಖಲಿಸಿದ್ದರು.
ಬಳಿಕ, ನಗರದ 51ನೇ ಸಿಸಿಎಚ್ ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಬಿ.ಕೆ.ಕೋಮಲ ಅವರು ಯಶೋವರ್ಧನ ರೆಡ್ಡಿಯ ಕೃತ್ಯ ಸಾಬೀತಾದ ಹಿನ್ನೆಲೆ 10 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಅಭಿಯೋಜನೆ ಪರ ಪಬ್ಲಿಕ್ ಪ್ರಾಸಿಕ್ಯೂಟರ್ ಕೆ.ಎಸ್ ವೀಣಾ ಪ್ರಬಲವಾದ ಮಂಡಿಸಿದ್ದರು.